ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ’

ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಅಧ್ಯಕ್ಷೆ ಜಯಮ್ಮ ಸೂಚನೆ
Last Updated 22 ಡಿಸೆಂಬರ್ 2018, 13:18 IST
ಅಕ್ಷರ ಗಾತ್ರ

ದೇವನಹಳ್ಳಿ: ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಲಿದೆ. ಆದ್ದರಿಂದ ಮುಂಬರುವ ಬೇಸಿಗೆಗೆ ಉಪಯೋಗವಾಗುವಂತೆ ಯೋಜನೆ ರೂಪಿಸಿ ನೀರಿನ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಲಕ್ಷ್ಮಿನಾರಾಯಣ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳನ್ನು ಈಗಾಗಲೇ ‘ಬರಪೀಡಿತ’ ಎಂದು ಘೋಷಿಸಲಾಗಿದೆ. ನೆಲಮಂಗಲ ತಾಲ್ಲೂಕಿನಲ್ಲಿಯೂ ನೀರಿನ ಸಮಸ್ಯೆ ಕಂಡುಬಂದಿದೆ. ಆದ್ದರಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗಕ್ಕೆ ಎಸ್.ಡಿ.ಆರ್.ಎಫ್ ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಸದ್ಬಳಕೆ ಮಾಡಲು ಅಗತ್ಯವಿರುವ ಕಡೆಗೆ ಕ್ರಿಯಾ ಯೋಜನೆ ರೂಪಿಸಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯರ ಗಮನಕ್ಕೆ ತಂದು ಪೈಪ್ ಲೈನ್, ಪಂಪು, ಮೋಟಾರ್ ಅಳವಡಿಕೆ ಇನ್ನಿತರ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಕಾರ್ಯಪಾಲಕ ಎಂಜಿನಿಯರ್‌ಗೆ ಸೂಚಿಸಿದರು.

ಜಿಲ್ಲೆಯ 197 ಸರ್ಕಾರಿ ಶಾಲಾ ಕಟ್ಟಡಗಳಿಗೆ ಯಾವುದೇ ದಾಖಲಾತಿ ಇರುವುದಿಲ್ಲ. ಇದೇ ರೀತಿ ಅಂಗನವಾಡಿ ಕಟ್ಟಡಗಳು, ಹಾಸ್ಟೆಲ್ ಕಟ್ಟಡಗಳು, ವಿವಿಧ ಇಲಾಖೆಗಳ ಜಮೀನು, ನಿವೇಶನಗಳು, ಕಟ್ಟಡಗಳಿಗೆ ದಾಖಲೆಗಳು ಇರುವುದಿಲ್ಲ ಎಂದು ಜಿಲ್ಲಾ ಪಂಚಾಯಿತಿ ಸದಸ್ಯರೊಬ್ಬರು ಸಭೆಯಲ್ಲಿ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ಹೊಂದಿರುವ ಆಸ್ತಿಗಳ ವಿವರವನ್ನು ಪರಿಷ್ಕರಿಸಬೇಕು. ಇಲಾಖೆ ಹೆಸರಿಗೆ ಖಾತಾ ಮಾಡಿಸಿಕೊಳ್ಳಬೇಕು. ಸಮಸ್ಯೆ ಇದ್ದರೆ ಲಭ್ಯವಿರುವ ಮೂಲ ದಾಖಲಾತಿಗಳ ವಿವರವನ್ನು ಮುಂದಿನ ಸಭೆಯಲ್ಲಿ ನೀಡಬೇಕು ಎಂದರು.

ಖಾತೆ ಕುರಿತು ಸಮಸ್ಯೆ ಇದ್ದರೆ ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಪಂಚಾಯಿತಿ ಸದಸ್ಯರ ಗಮನಕ್ಕೆ ತಂದು ಕೂಡಲೇ ಬಗೆಹರಿಸಿಕೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ವಿದ್ಯಾರ್ಥಿನಿಲಯಗಳಲ್ಲಿ ಮೂಲಸೌಕರ್ಯಗಳ ಕೊರತೆಯಿದೆ. ಸುಸಜ್ಜಿತವಾದ ಕಟ್ಟಡ ನಿರ್ಮಿಸಿದರೆ ಸಾಲದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಜಿಲ್ಲಾ ಪಂಚಾಯಿತಿ ಸದಸ್ಯರೆಲ್ಲರೂ ತಿಳಿಸಿದರು. ಆಗ ಮಾತನಾಡಿದ ಅಧ್ಯಕ್ಷೆ , ವಾರ್ಡ್‌ಗಳಲ್ಲಿರುವ ಮೂಲ ಸೌಕರ್ಯಗಳ ಸಮಸ್ಯೆ ನಿವಾರಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಹಾಗೂ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲ್ಲೂಕು ಆರೋಗ್ಯ ಕೇಂದ್ರಗಳ ಪೈಕಿ ಕೆಲವು ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಸಿಬ್ಬಂದಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹಲವೆಡೆ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯಿದೆ. ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕೆಂದು ಅಧ್ಯಕ್ಷರು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಸಬಲೀಕರಣ ಇಲಾಖೆ, ನಿಗಮಗಳು, ಮಂಡಳಿಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಇದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್.ಶೋಭಾ, ಯೋಜನಾ ನಿರ್ದೇಶಕ ಡಾ.ಶಿವರುದ್ರಪ್ಪ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT