ಗುರುವಾರ , ಜನವರಿ 20, 2022
15 °C

ವಿಪಕ್ಷಗಳಿಂದ ದಿಕ್ಕು ತಪ್ಪಿಸುವ ಕೆಲಸ: ಅಭ್ಯರ್ಥಿ ರಮೇಶ್ ಗೌಡ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ 8 ತಾಲ್ಲೂಕುಗಳ ಪೈಕಿ 5 ತಾಲ್ಲೂಕಿನಲ್ಲಿ ಜೆಡಿಎಸ್ ಶಾಸಕರಿದ್ದು, ಸ್ಥಳೀಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಜನಪ್ರತಿನಿಧಿಗಳಿದ್ದಾರೆ. ಹೀಗಾಗಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದೇವೆ’ ಎಂದು ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಚನ್ನರಾಯಪಟ್ಟಣ ಹೋಬಳಿಯ ಯಲಿಯೂರು ಗೇಟ್ ಬಳಿ ಸೋಮವಾರ ನಡೆದ ಜೆಡಿಎಸ್‌ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದಿಂದ ಸ್ಪರ್ಧಿಸಬೇಕು ಎಂಬುದು ನನ್ನ ಆಸೆಯಾಗಿತ್ತು. ಆದರೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಒತ್ತಾಸೆಯಂತೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದೇನೆ’ ಎಂದರು.

ಎಲ್ಲಾ ಕಡೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದೇವೇಗೌಡರು ಜಾರಿಗೆ ತಂದ ಮಹಿಳಾ ಮೀಸಲಾತಿಯಿಂದ ಸಾಕಷ್ಟು ಮಹಿಳೆಯರು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಿದೆ. ಪಕ್ಷ ಸದೃಢವಾಗಬೇಕಾದರೆ ಈ ಚುನಾವಣೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತರ ಶ್ರಮ ಅಗತ್ಯವಾಗಿದೆ ಎಂದು ಹೇಳಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ‘ಪಕ್ಷದ ಕಾರ್ಯಕರ್ತರು ಪ್ರಥಮ ಪ್ರಾಶಸ್ತ್ಯದ ಮತವನ್ನು ಮಾತ್ರ ಚಲಾಯಿಸಬೇಕು. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ಈ ಚುನಾವಣೆಯಲ್ಲಿ 3,900 ಮತದಾರರು ಮತ ಚಲಾಯಿಸಿದರೂ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ’ ಎಂದು ತಿಳಿಸಿದರು.

ವಿರೋಧ ಪಕ್ಷದವರು ಸಾಕಷ್ಟು ದಿಕ್ಕು ತಪ್ಪಿಸುತ್ತಾರೆ. ಅದಕ್ಕೆ ಪಕ್ಷದ ಯಾವ ಜನಪ್ರತಿನಿಧಿಗಳೂ ಕಿವಿಗೊಡಬಾರದು. ಪಕ್ಷವನ್ನು ಸದೃಢಗೊಳಿಸುವುದೇ ನಮ್ಮ ಮೂಲ ಗುರಿಯಾಗಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮಿಷನ್ 123 ಆಗಬೇಕು. ನಿಮ್ಮೊಂದಿಗೆ ವಿಶ್ವಾಸದಲ್ಲಿರುವ ಇತರೆ ಸದಸ್ಯರ ವಿಶ್ವಾಸ ಪಡೆದುಕೊಂಡು ಪಕ್ಷದ ಅಭ್ಯರ್ಥಿಗೆ ಮತ ಹಾಕಿಸಬೇಕು ಎಂದು ಸಲಹೆ ನೀಡಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಮುನೇಗೌಡ ಮಾತನಾಡಿ, ಜೆಡಿಎಸ್ ತನ್ನದೇ ಆದ ತತ್ವ, ಸಿದ್ಧಾಂತ ಹೊಂದಿದೆ. ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ಕರೆದೊಯ್ಯುವಂತಹ ಪಕ್ಷವಾಗಿದೆ. ಪಕ್ಷದ ಮೇಲೆ ನಂಬಿಕೆ ಇಟ್ಟು ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಸ್ಥಳೀಯ ಜನಪ್ರತಿನಿಧಿಗಳು ಮಾತ್ರವಲ್ಲದೇ ಪ್ರತಿಯೊಬ್ಬ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಜೆಡಿಎಸ್ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಕಲ್ಯಾಣ್ ಕುಮಾರ್ ಬಾಬು, ವಿಜಯಪುರ ಪುರಸಭೆ ಅಧ್ಯಕ್ಷೆ ರಾಜೇಶ್ವರಿ ಎಸ್. ಭಾಸ್ಕರ್, ಉಪಾಧ್ಯಕ್ಷ ಎಂ. ಕೇಶವಪ್ಪ, ಮಂಡಿಬೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ವೀರಭದ್ರ, ವೆಂಕಟಗಿರಿಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್. ಶ್ರೀನಿವಾಸ್, ಐಬಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಮೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ನಾರಾಯಣಸ್ವಾಮಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ವಿಜಯಪುರ ಹೋಬಳಿ ಅಧ್ಯಕ್ಷ ವೀರಪ್ಪ, ಮುಖಂಡರಾದ ಮುನಿರಾಜು, ಎನ್. ನಾರಾಯಣಸ್ವಾಮಿ, ಎಸ್.ಆರ್.ಎಸ್. ಬಸವರಾಜ್, ಶಿವಾನಂದ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು