ಬೆಳಗಾವಿ: ‘ಬೆಳಗಾವಿಯಲ್ಲಿ ಹೊಸ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣ ಕಾಮಗಾರಿ ಜನವರಿ ತಿಂಗಳೊಳಗೆ ಆರಂಭಿಸಲಾಗುವುದು. ಈ ಕಾಮಗಾರಿಗೆ ₹200 ಕೋಟಿ ವೆಚ್ಚವಾಗಲಿದ್ದು, ಪ್ರಥಮ ಹಂತದಲ್ಲಿ ₹100 ಕೋಟಿ ಶೀಘ್ರ ಬಿಡುಗಡೆಗೊಳಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡನೇ ಹಂತದಲ್ಲಿ ಬಾಕಿ ಉಳಿದ ಅನುದಾನ ಬಿಡುಗಡೆಗೊಳಿಸಿ, ಮೂರು ವರ್ಷಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಹೊಸ ಸಂಕೀರ್ಣಕ್ಕೆ ಬರಲಿರುವ ಜಿಲ್ಲಾಧಿಕಾರಿ ಕಚೇರಿ ಮತ್ತು ಇತರೆ ಕಚೇರಿಗಳನ್ನು ತಾತ್ಕಾಲಿಕವಾಗಿ ಲಭ್ಯವಿರುವ ಸಮೀಪದ ವಸತಿಗಳಿಗೆ ಸ್ಥಳಾಂತರಿಸಲಾಗುವುದು’ ಎಂದರು.
‘ನಾನು ಈ ಹಿಂದೆ ಸಚಿವನಾಗಿದ್ದ ಅವಧಿಯಲ್ಲೇ ಹೊಸ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಯೋಜನೆ ರೂಪಿಸಿದ್ದೆವು. ಅದು ಕಾರ್ಯರೂಪಕ್ಕೆ ಬರಲಿಲ್ಲ. ಈಗ ಯೋಜನೆಗೆ ಚಾಲನೆ ಸಿಗುತ್ತಿದೆ’ ಎಂದು ತಿಳಿಸಿದರು.
‘ರಸ್ತೆ ಮೇಲ್ಸೇತುವೆ ಮತ್ತು ರಿಂಗ್ ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರ ಆರಂಭವಾಗಲಿವೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಈ ಕುರಿತು ಮಾತುಕತೆ ನಡೆಸಿದ್ದೇವೆ. ವಿಳಂಬವಾಗಿರುವ ಹಲಗಾ-ಮಚ್ಛೆ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸುವ ಬಗ್ಗೆ ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಆಡಳಿತಾತ್ಮಕ ಅನುಕೂಲತೆ ದೃಷ್ಟಿಯಿಂದ ಬೆಳಗಾವಿ ತಾಲ್ಲೂಕು ವಿಭಜನೆಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.
‘ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪ್ರತಿಬಾರಿಯಂತೆ ಕರಾಳ ದಿನ ಆಚರಿಸುತ್ತಿದೆ. ಅಲ್ಲಿ ಅಹಿತಕರ ಘಟನೆಗಳು ನಡೆಯಬಾರದೆಂದು ಪೊಲೀಸ್ ಭದ್ರತೆ ಒದಗಿಸಿದ್ದೇವೆ. ಕಾನೂನು ಉಲ್ಲಂಘಿಸಿದರೆ ಎಂಇಎಸ್ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಹೇಳಿದರು.
‘ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಮುಂದಿನ ವರ್ಷ ಆ ಘಳಿಗೆಗೆ 100 ವರ್ಷ ತುಂಬಲಿದೆ. ಇದರ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲು ಮತ್ತು ಅನುದಾನ ತರಲು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ಹುದಲಿ ಮತ್ತು ಕಣಬರ್ಗಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಗಂಗಾಧರರಾವ್ ದೇಶಪಾಂಡೆ ಸ್ಮಾರಕ ನಿರ್ಮಾಣಕ್ಕೆ ಬೇಡಿಕೆಯಿದೆ. ಸ್ಥಳ ಅಂತಿಮಗೊಳಿಸಿದ ನಂತರ, ಕಾಮಗಾರಿ ಆರಂಭಿಸುತ್ತೇವೆ’ ಎಂದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.