ಶುಕ್ರವಾರ, ಮೇ 7, 2021
26 °C

ಸುವರ್ಣ ವಿಧಾನಸೌಧದ 1 ಕಿ.ಮೀ. ಸುತ್ತಮುತ್ತ ನಿಷೇಧಾಜ್ಞೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಸುವರ್ಣ ವಿಧಾನಸೌಧದ ಬಳಿ ಕೆಲವು ಸಂಘ-ಸಂಸ್ಥೆಯವರು, ಪ್ರತಿಭಟನಾಕಾರರು ಸಣ್ಣಪುಟ್ಟ ವಿಷಯಗಳಿಗೂ ಪ್ರತಿಭಟಿಸುವುದು ಸಾಮಾನ್ಯವಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ಅಡ್ಡಿ ಆಗುತ್ತಿರುವುದನ್ನು ತಡೆಗಟ್ಟಲು ಅಲ್ಲಿನ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ’ ಎಂದು ನಗರ ಪೊಲೀಸ್ ಆಯುಕ್ತ ಡಾ.ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

‘ಶನಿವಾರದಿಂದಲೇ ನಿಷೇಧಾಜ್ಞೆ ಜಾರಿಗೆ ಬಂದಿದೆ. ಮೇ 5ರ ಮಧ್ಯರಾತ್ರಿವರೆಗೆ ಜಾರಿಗೆ ಬರುವಂತೆ ಸಿ.ಆರ್.ಪಿ.ಸಿ. 1973ರ ಕಲಂ 144ರ ಮೇರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿದ್ದು, ಪ್ರತಿಭಟನೆಯಿಂದಾಗಿ ಅಪಘಾತಗಳು ಕೂಡ ಸಂಭವಿಸುತ್ತಿವೆ. ಆದ್ದರಿಂದ ಇದನ್ನು ನಿಯಂತ್ರಿಸುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದಿದ್ದಾರೆ.

‘ಆ ವ್ಯಾಪ್ತಿಯಲ್ಲಿ ಐವರಿಗಿಂತ ಹೆಚ್ಚಿನವರು ಗುಂಪು ಸೇರುವುದು, ಮೆರವಣಿಗೆ, ಸಭೆ (ಸರ್ಕಾರಿ ಸಭೆ-ಸಮಾರಂಭ ಹೊರತುಪಡಿಸಿ) ಅಥವಾ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ. ಶಸ್ತ್ರ, ಬಡಿಗೆ, ಭರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದು ಮತ್ತು ಹಿಡಿದು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಕಲ್ಲು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಫೋಟಕ ವಸ್ತುಗಳು ಮೊದಲಾದವುಗಳನ್ನು ಆ ಸ್ಥಳಕ್ಕೆ ಒಯ್ಯುವುದು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಅಲ್ಲಿ ಸಾರ್ವಜನಿಕವಾಗಿ ಯಾರೇ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳನ್ನು ಹಾಡುವುದು, ಕೂಗಾಡುವುದು ಹಾಗೂ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮೊದಲಾದವುಗಳನ್ನು ಪ್ರದರ್ಶಿಸುವುದು, ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ನಿಷೇಧಾಜ್ಞೆ ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು