ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಸುವರ್ಣ ವಿಧಾನಸೌಧ ಸುತ್ತ ನಿಷೇದಾಜ್ಞೆ

Last Updated 25 ನವೆಂಬರ್ 2020, 14:23 IST
ಅಕ್ಷರ ಗಾತ್ರ

ಬೆಳಗಾವಿ: ‘ಸುವರ್ಣ ವಿಧಾನಸೌಧದ ಬಳಿ ಕೆಲವು ಸಂಘ-ಸಂಸ್ಥೆಯವರು, ಪ್ರತಿಭಟನಾಕಾರರು ಸಣ್ಣಪುಟ್ಟ ವಿಷಯಗಳಿಗೂ ಪ್ರತಿಭಟಿಸುವುದು ಸಾಮಾನ್ಯವಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ಅಡ್ಡಿ ಆಗುತ್ತಿರುವುದನ್ನು ತಡೆಗಟ್ಟಲು ಅಲ್ಲಿನ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ’ ಎಂದು ನಗರ ಪೊಲೀಸ್ ಆಯುಕ್ತ ಡಾ.ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

‘ಮುಂದಿನ ವರ್ಷದ ಜನವರಿ 24ರ ಮಧ್ಯರಾತ್ರಿವರೆಗೆ ಜಾರಿಗೆ ಬರುವಂತೆ ಸಿ.ಆರ್.ಪಿ.ಸಿ. 1973ರ ಕಲಂ 144ರ ಮೇರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಿದ್ದು, ಪ್ರತಿಭಟನೆಯಿಂದಾಗಿ ಅಪಘಾತಗಳು ಕೂಡ ಸಂಭವಿಸುತ್ತಿವೆ. ಆದ್ದರಿಂದ ಇದನ್ನು ನಿಯಂತ್ರಿಸುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದಿದ್ದಾರೆ.

‘ಆ ವ್ಯಾಪ್ತಿಯಲ್ಲಿ ಐವರಿಗಿಂತ ಹೆಚ್ಚಿನವರು ಗುಂಪು ಸೇರುವುದು, ಮೆರವಣಿಗೆ, ಸಭೆ (ಸರ್ಕಾರಿ ಸಭೆ-ಸಮಾರಂಭ ಹೊರತುಪಡಿಸಿ) ಅಥವಾ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ. ಶಸ್ತ್ರ, ಬಡಿಗೆ, ಭರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದು ಮತ್ತು ಹಿಡಿದು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಕಲ್ಲು, ಕ್ಷಾರಪದಾರ್ಥ, ಪಟಾಕಿ ಇಲ್ಲವೆ ಸ್ಫೋಟಕ ವಸ್ತುಗಳು ಮೊದಲಾದವುಗಳನ್ನು ಆ ಸ್ಥಳಕ್ಕೆ ಒಯ್ಯುವುದು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಅಲ್ಲಿ ಸಾರ್ವಜನಿಕವಾಗಿ ಯಾರೇ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳನ್ನು ಹಾಡುವುದು, ಕೂಗಾಡುವುದು ಹಾಗೂ ತೇಜೋವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮೊದಲಾದವುಗಳನ್ನು ಪ್ರದರ್ಶಿಸುವುದು, ಸಾರ್ವಜನಿಕರ ಗಾಂಭಿರ್ಯ ಹಾಗೂ ನೈತಿಕತೆಗೆ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ನಿಷೇಧಾಜ್ಞೆ ಉಲ್ಲಂಘಿಸಿದರೆ ಹಾಗೂ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ರಸ್ತೆ ತಡೆದು ಪ್ರತಿಭಟಿಸಿ, ಸಂಚಾರಕ್ಕೆ ತಡೆ ಒಡ್ಡಿದರೆ ಅಂಥವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT