ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿವೃಷ್ಟಿ ಪರಿಹಾರಕ್ಕೆ ₹ 412 ಕೋಟಿ

ಮುಖ್ಯಮಂತ್ರಿಯಿಂದ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ
Last Updated 25 ಆಗಸ್ಟ್ 2020, 10:44 IST
ಅಕ್ಷರ ಗಾತ್ರ

ಬೆಳಗಾವಿ: ‘ಅತಿವೃಷ್ಟಿಯಿಂದಾದ ಹಾನಿಗೆ ಪರಿಹಾರ ನೀಡುವುದು ಸೇರಿದಂತೆ ತುರ್ತು ಕೆಲಸಕ್ಕೆ ಜಿಲ್ಲೆಯಲ್ಲಿ ₹ 412 ಕೋಟಿ ಲಭ್ಯವಿದೆ. ಹೆಚ್ಚಿನ ಅನುದಾನ ಬೇಕಾದಲ್ಲಿ ತಕ್ಷಣವೇ ಬಿಡುಗಡೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಮುನ್ನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಂಗಳವಾರ ನಡೆದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ ₹ 174 ಕೋಟಿ ಇದೆ. ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಬೇಕು. ಮಳೆಯಿಂದಾದ ಹಾನಿ ಮತ್ತು ಅನುದಾನ ಬೇಡಿಕೆ ಮಾಹಿತಿಯನ್ನು ತಕ್ಷಣ ಸಲ್ಲಿಸಬೇಕು. ಇತರ ಜಿಲ್ಲೆಗಳಲ್ಲೂ ಸಾಕಷ್ಟು ಹಣ ಲಭ್ಯವಿದ್ದು, ಅದನ್ನು ಬಳಸಬೇಕು’ ಎಂದು ಸೂಚಿಸಿದರು.

ಪುನರಾರಂಭಕ್ಕೆ ನಿರ್ಧಾರ:ಕಂದಾಯ ಸಚಿವ ಆರ್. ಅಶೋಕ, ‘ಕಳೆದ ವರ್ಷದ ಮನೆ ಪರಿಹಾರ ಕಲ್ಪಿಸಲು ನಿಗದಿತ ತಂತ್ರಾಂಶ ಪುನರಾರಂಭಿಸುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ‘ಜಿಲ್ಲೆಯಲ್ಲಿ ಇನ್ನೂ 9 ಸಾವಿರ ಮನೆಗಳನ್ನು ಪರಿಹಾರದ ಪಟ್ಟಿಗೆ ಸೇರಿಸಿ ಹಣ ಬಿಡುಗಡೆ ಮಾಡಬೇಕು’ ಎಂದು ಕೋರಿದರು.

ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ‘ಕೆರೆಗಳು ಹಾಗೂ ಬಾಂದಾರಗಳು ಒಡೆದಿದ್ದರಿಂದ ಬೆಳೆ ಹಾನಿಯಾಗಿದೆ. ಅವುಗಳ ದುರಸ್ತಿಗೆ ಮತ್ತು ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡಬೇಕು’ ಎಂದು ಕೋರಿದರು.

ಧಾರವಾಡ ಜಿಲ್ಲೆಯ ಶಾಸಕ ಅರವಿಂದ ಬೆಲ್ಲದ, ‘ಮಳೆ ಪ್ರಮಾಣ ತಿಳಿಯಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಬೇಕು. ಹುಬ್ಬಳ್ಳಿ-ಧಾರವಾಡ ರಸ್ತೆ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು’ ಎಂದು ಆಗ್ರಹಿಸಿದರು.

ಶಾಶ್ವತ ಪರಿಹಾರ ಕಲ್ಪಿಸಿ:ಶಾಸಕ ಶಂಕರಪಾಟೀಲ ಮುನೇನಕೊಪ್ಪ ಹಾಗೂ ಅಮೃತ ದೇಸಾಯಿ, ‘ಪ್ರತಿ ಮಳೆಗಾಲದಲ್ಲಿ ಬೆಣ್ಣಿಹಳ್ಳದಿಂದ ಉದ್ಭವಿಸುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು’ ಎಂದು ಕೋರಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ‘ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಮಹಾರಾಷ್ಟ್ರ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿದ್ದರಿಂದ ಪ್ರವಾಹ ನಿರ್ವಹಣೆ ಸಾಧ್ಯವಾಯಿತು’ ಎಂದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡ್ಡಗೌಡರ ಮಾತನಾಡಿದರು.

ಜವಳಿ ಸಚಿವ ಶ್ರೀಮಂತ ಪಾಟೀಲ, ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಪಿ. ರಾಜೀವ, ಡಿ.ಎಂ. ಐಹೊಳೆ, ಉಮೇಶ ಕತ್ತಿ, ಮಹಾಂತೇಶ ಕೌಜಲಗಿ, ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಎಲ್. ಅತೀಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT