ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಜಿನಿಯರಿಂಗ್ ಕೋರ್ಸ್‌ ಪ್ರವೇಶ ಶುಲ್ಕ ಏರಿಕೆ: ಎಬಿವಿಪಿ ಪ್ರತಿಭಟನೆ

Last Updated 17 ನವೆಂಬರ್ 2021, 15:28 IST
ಅಕ್ಷರ ಗಾತ್ರ

ಬೆಳಗಾವಿ: ಸರ್ಕಾರಿ ಕೋಟಾದಲ್ಲಿ ಎಂಜಿನಿಯರಿಂಗ್ ಕೋರ್ಸ್‌ ಪ್ರವೇಶಕ್ಕೆ ಶುಲ್ಕ ಏರಿಕೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿ‍ಪಿ) ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸ್‌ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡುವುದಿಲ್ಲ ಎಂದು ಉನ್ನತಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದರು. ಆದರೆ, ಸರ್ಕಾರವು ಕೆಲವು ಪರೋಕ್ಷ ಕ್ರಮಗಳ ಮೂಲಕ ಶುಲ್ಕ ಹೆಚ್ಚಳಕ್ಕೆ ದಾರಿ ಮಾಡಿಕೊಡುವ ಆದೇಶ ಹೊರಡಿಸಿದೆ. ಇದರಿಂದಾಗಿ ಎಂಜಿನಿಯರಿಂಗ್ ವ್ಯಾಸಂಗದ ಕನಸು ಕಂಡಿರುವ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳ ಕನಸು ಕನಸಾಗಿಯೇ ಉಳಿಯಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಸರ್ಕಾರಿ ಕೋಟಾದಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ನಿಗದಿತ ಶುಲ್ಕದೊಂದಿಗೆ ‘ಕಾಲೇಜುಗಳ ಇತರ ಶುಲ್ಕ’ವೆಂದು ₹ 20ಸಾವಿರ, ಕೌಶಲ ಪ್ರಯೋಗಾಲಯಕ್ಕಾಗಿ ₹ 10ರಿಂದ ₹20ಸಾವಿರ ವಸೂಲಿಗೆ ಅವಕಾಶ ಕೊಟ್ಟಿದೆ. ಇದರಿಂದಾಗಿ ವಿದ್ಯಾರ್ಥಿಯು ₹ 40ಸಾವಿರದವರೆಗೆ ಪಾವತಿಸಬೇಕಾಗುತ್ತದೆ’ ಎಂದು ತಿಳಿಸಿದರು.

‘ಹಿಂದಿನ ವರ್ಷಗಳಲ್ಲಿ ಕಾಲೇಜುಗಳಲ್ಲಿ ಹೆಚ್ಚುವರಿ ಶುಲ್ಕಗಳನ್ನು ಪಡೆಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಕಡಿವಾಣ ಹಾಕಿತ್ತು. ಈಗ ಬೇಲಿಯೇ ಎದ್ದು ಹೊಲ ಮೇಯಿತು ಎನ್ನುವಂತೆ ಸರ್ಕಾರವೆ ಅವಕಾಶ ಮಾಡಿಕೊಟ್ಟಿದೆ. ಕೋವಿಡ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಪೋಷಕರಿಗೆ ಇದು ಹೊರೆಯಾಗಿ ಪರಿಣಮಿಸಿದೆ’ ಎಂದು ದೂರಿದರು.

ಮುಖಂಡ ಪೃಥ್ವಿಕುಮಾರ್ ಮಾತನಾಡಿ, ‘ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ಆಡುತ್ತಿದೆ. ಕಳೆದ ವರ್ಷ ₹ 65ಸಾವಿರದಿಂದ ₹70ಸಾವಿರ ಆಸುಪಾಸಿನಲ್ಲಿದ್ದ ಎಂಜಿನಿಯರಿಂಗ್ ಕೋರ್ಸ್ ಶುಲ್ಕವನ್ನು ₹ 85ಸಾವಿರದಿಂದ ₹ 90ಸಾವಿರದವರೆಗೆ ಏರಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುತ್ತಿರುವ ಈ ಸಂದರ್ಭದಲ್ಲಿ ₹ 20ಸಾವಿರ ಶುಲ್ಕ ಹೆಚ್ಚಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುತ್ತಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಶುಲ್ಕ ಹೆಚ್ಚಳ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುರೇಶ್ ಜಂಗೋಣಿ, ವಿಭಾಗ ಸಂಚಾಲಕ ರೋಹಿತ್ ಉಮನಾಬಾದಿಮಠ, ತಾಲ್ಲೂಕು ಸಂಚಾಲಕ ಕಿರಣ ದುಖಾಂದಾರ, ಕೃಷ್ಣ ಜೋಶಿ, ತನ್ಮಯ, ಪ್ರಶಾಂತ್ ಮುತಾಲಿಕ್, ಅಶ್ವಿನ್ ಉಮನಾಬಾದಿಮಠ, ಪ್ರಜ್ವಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT