ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್: ಎಬಿವಿಪಿ ಆಗ್ರಹ

Last Updated 18 ಜೂನ್ 2019, 14:56 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯದ ಎಲ್ಲ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್ ನೀಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

‘ಶಿಕ್ಷಣ ಎಲ್ಲರಿಗೂ ದೊರೆಯಬೇಕಾದ ಸಂಪತ್ತು. ಜಾತಿ, ಮತ, ಬಡವ ಮತ್ತು ಶ್ರೀಮಂತರೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರಗಳದ್ದು. ಈ ನಿಟ್ಟಿನಲ್ಲಿ 2018–19ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ‍ಪಂಗಡದವರು ಸೇರಿದಂತೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ, ಈವರೆಗೂ ಯೋಜನೆ ಜಾರಿಗೆ ಬಂದಿಲ್ಲ. ಇದು ಖಂಡನೀಯ’ ಎಂದರು.

‘ರಾಜ್ಯದಾದ್ಯಂತ ಬರಗಾಲ ಪರಿಸ್ಥಿತಿ ಇದೆ. ರೈತ ಕುಟುಂಬಗಳು ಸಂಕಷ್ಟದಲ್ಲಿವೆ. ಈ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಒದಗಿಸಿದರೆ, ಆ ಕುಟುಂಬಗಳಿಗೂ ನೆರವಾಗಲಿದೆ. ಹಳ್ಳಿಗಳಿಂದ ಪಟ್ಟಣ, ತಾಲ್ಲೂಕು, ಜಿಲ್ಲಾ ಕೇಂದ್ರಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ’ ಎಂದು ತಿಳಿಸಿದರು.

‘ಕಳೆದ ವರ್ಷ ಹಣವಿಲ್ಲವೆಂಬ ನೆಪವೊಡ್ಡಿದ್ದ ಸರ್ಕಾರ, ಈ ವರ್ಷವೂ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡುವುದು ಸರಿಯಲ್ಲ’ ಎಂದು ಹೇಳಿದರು.

ಪದಾಧಿಕಾರಿಗಳಾದ ರೋಹಿತ ಉಮನಾಬಾದಿಮಠ, ಸಚಿನ್ ಹಿರೇಮಠ, ಕಿರಣ್, ವಿದ್ಯಾಪಾಟೀಲ, ಆನಂದ್ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT