ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅದ್ಧೂರಿಯಾಗಿ ವಿವಿಧ ಜಯಂತಿಗಳ ಆಚರಣೆ: ಹೊನಕೇರಿ

Published 6 ಜನವರಿ 2024, 16:09 IST
Last Updated 6 ಜನವರಿ 2024, 16:09 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಜ.16ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ, 19ರಂದು ಮಹಾಯೋಗಿ ವೇಮನ ಜಯಂತಿ ಹಾಗೂ 28ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಜಯಂತಿಗಳ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕುಮಾರ ಗಂಧರ್ವ ರಂಗಮಂದಿರದಲ್ಲಿ ಸಿದ್ಧರಾಮೇಶ್ವರ ಜಯಂತಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಅದೇ ರಂಗಮಂದಿರದಲ್ಲಿ ವೇಮನ ಜಯಂತಿ ಕಾರ್ಯಕ್ರಮ ಮತ್ತು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ರಂಗಮಂದಿರದವರೆಗೆ ಮೆರವಣಿಗೆ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ಸರ್ದಾರ್ಸ್‌ ಪ್ರೌಢಶಾಲೆ ಮೈದಾನದಲ್ಲಿ ಅಂಬಿಗರ ಚೌಡಯ್ಯ ಜಯಂತಿ ನೆರವೇರಲಿದೆ. ಇದಕ್ಕೂ ಮುನ್ನ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.

‘ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ. ಹಾಗಾಗಿ ಭವ್ಯ ವೇದಿಕೆ ಸಿದ್ಧಪಡಿಸಬೇಕು. ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು. ಹೆಚ್ಚಿನ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಬೇಕು. ಜಯಂತಿಯಂದು ಜಿಲ್ಲೆಯ ಎಲ್ಲ ಶಾಲಾ–ಕಾಲೇಜು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು’ ಎಂದು ಮುಖಂಡ ದಿಲೀಪ ಕುರಂದವಾಡೆ ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ರಾಮಚಂದ್ರ ಸುಣಗಾರ, ಅಶೋಕ ಕೋಳಿ, ಅಪ್ಪಯ್ಯ ರಾಮರಾವ್, ಗೀತಾ ಕೋಳಿ, ಅಪ್ಪಾಸಾಹೇಬ ಪೂಜಾರಿ, ಮಂಜುನಾಥ ಪಾಟೀಲ, ಆರ್.ಬಿ. ಬಂಡಿವಡ್ಡರ, ಎಸ್.ಬಿ.ರೆಡ್ಡಿ, ಶಂಕರ ಹಾದಿಮನಿ, ರಾಜೇಂದ್ರ ಪಾಟೀಲ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT