ಬೆಳಗಾವಿ: ‘ಮಾದಕ ವಸ್ತುಗಳು ಸೇರಿದಂತೆ ಯಾವುದೇ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳ ತಲೆ ದಂಡ ಮಾಡಲಾಗುವುದು’ ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ತಿಳಿಸಿದರು.
ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಂಚಾರ ನಿರ್ವಹಣೆ ಎಲ್ಲ ಮಹಾನಗರಗಳಲ್ಲಿರುವ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿ, ಸಬ್ ಇನ್‌ಸ್ಪೆಕ್ಟರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುವ ಕೆಲಸ ಮಾಡಲಾಗುತ್ತಿದೆ. ಕೆಲವು ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಲಾಗಿದೆ. ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.
‘ಈ ವರ್ಷ 10ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕರು ಹೇಳಿದ್ದಾರೆ. ಅವರೆಲ್ಲರೂ ನೇಮಕವಾಗಿ ತರಬೇತಿ ಮುಗಿಸಿ ಕರ್ತವ್ಯಕ್ಕೆ ವರದಿ ಮಾಡಿಕೊಂಡ ಬಳಿಕ ಸಿಬ್ಬಂದಿ ಕೊರತೆ ಒಂದಷ್ಟು ನೀಗಲಿದೆ’ ಎಂದು ತಿಳಿಸಿದರು.
ಪರಿಶೀಲನೆ: ನಂತರ ಅವರು, ಜ.17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಾಲ್ಗೊಳ್ಳಲಿರುವ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪ ನಡೆಯಲಿರುವ ಜಿಲ್ಲಾ ಕ್ರೀಡಾಂಗಣವನ್ನು ಪರಿಶೀಲಿಸಿದರು. ಭದ್ರತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪೊಲೀಸ್ ಅಧಿಕಾರಿಗಳು ಮತ್ತು ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.