ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚಿಕಿತ್ಸೆಯಿಂದ ಯಾರೂ ವಂಚಿತರಾಗಬಾರದು'

ಬೆಳಗಾವಿಯಲ್ಲಿ ವಿಶ್ವ ಏಡ್ಸ್ ದಿನ
Last Updated 1 ಡಿಸೆಂಬರ್ 2020, 16:07 IST
ಅಕ್ಷರ ಗಾತ್ರ

ಬೆಳಗಾವಿ: ‘ಏಡ್ಸ್‌ನಿಂದ ಬಳಲುತ್ತಿರುವ ಯಾವುದೇ ವ್ಯಕ್ತಿ ಕೂಡ ಚಿಕಿತ್ಸೆಯಿಂದ ವಂಚಿತರಾಗದಂತೆ ನಾವೆಲ್ಲರೂ ಎಚ್ಚರಿಕೆ ವಹಿಸಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವ ಕಾರ್ಯದರ್ಶಿ ವಿಜಯ ದೇವರಾಜ ಅರಸ್ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಕ ಘಟಕದಿಂದ ಮಂಗಳವಾರ ಬಿಮ್ಸ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ವಿಶ್ವ ಏಡ್ಸ್ ದಿನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸಂವಿಧಾನದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾರಿಗೂ ಯಾವುದೇ ವಿಷಯದಲ್ಲಿ ತಾರತಮ್ಯ ಆಗದಂತೆ ನೋಡಿಕೊಳ್ಳಲು ಅನೇಕ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಚಿಕಿತ್ಸೆಯಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡಬಾರದು’ ಎಂದರು.

‘ಎಚ್‌ಐವಿ/ಏಡ್ಸ್ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸೋಂಕಿತರ ಚಿಕಿತ್ಸೆ ಮತ್ತು ಗೋಪ್ಯತೆ ಕಾಪಾಡಲು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಕಾನೂನು ಸಹಾಯವನ್ನೂ ಒದಗಿಸಲಾಗುವುದು’ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಡಿಎಚ್‌ಒ ಡಾ.ಶಶಿಕಾಂತ ಮುನ್ಯಾಳ, ‘ಮಾರಕ ರೋಗದ ವಿರುದ್ಧ ಹೋರಾಡುವುದು ಕೇವಲ ವೈದ್ಯರ ಹಾಗೂ ರೋಗಿಯ ಜವಾಬ್ದಾರಿಯಲ್ಲ. ಅದು ಸಮಾಜದ ಸಂಘಟಿತ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಹಲವು ಸಂಘ-ಸಂಸ್ಥೆಗಳು ನಿಸ್ವಾರ್ಥ ಸೇವೆ ಸಲ್ಲಿಸುತ್ತಿವೆ. ಅವುಗಳ ಕಾರ್ಯ ಶ್ಲಾಘನೀಯವಾಗಿದೆ’ ಎಂದು ಹೇಳಿದರು.

‘ಹಿಂದಿನ ವರ್ಷಗಳಿಗೆ ಹೋಲಿಸಿದರೆ ಇತ್ತೀಚಿನ ದಿನಗಳಲ್ಲಿ ಈ ಕಾಯಿಲೆಯ ಪ್ರಮಾಣ ಕಡಿಮೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹಲವು ರೀತಿಯ ಚಿಕಿತ್ಸಾ ವಿಧಾನಗಳು ಕೂಡ ಯಶಸ್ವಿಯಾಗುತ್ತಿವೆ. ಮುಂಬರುವ ದಿನಗಳಲ್ಲಿ ಲಸಿಕೆ ಕೂಡ ಲಭ್ಯವಾಗಬಹುದು’ ಎಂದರು.

ಬಿಮ್ಸ್ ನೋಡಲ್ ಅಧಿಕಾರಿ ಗಿರಿಧರ್ ಪಾಟೀಲ ಉಪನ್ಯಾಸ ನೀಡಿದರು.

ಎಂ.ಎಂ. ಸನದಿ ವಾರ್ಷಿಕ ಸಾಧನೆಯ ವರದಿ ಮಂಡಿಸಿದರು. ‘ಜಿಲ್ಲೆಯಲ್ಲಿ 165 ಎಫ್.ಐ.ಸಿ.ಟಿ. ಕೇಂದ್ರಗಳಲ್ಲಿ ಎಚ್‌ಐವಿ ಪರೀಕ್ಷೆ ಮಾಡಲಾಗುತ್ತಿದೆ. ಸೋಂಕು ದೃಢಪಟ್ಟರೆ ಸಮೀಪದ ಸಮಗ್ರ ಆಪ್ತ ಸಮಾಲೋಚನಾ ಕೇಂದ್ರಕ್ಕೆ ರೆಫರ್ ಮಾಡಲಾಗುತ್ತದೆ’ ಎಂದು ತಿಳಿಸಿದರು.

ಜಾಗೃತಿ ಮೂಡಿಸಲು ಶ್ರಮಿಸಿದ ಸಂಘ-ಸಂಸ್ಥೆಗಳವರು ಹಾಗೂ ಕಾರ್ಯಕರ್ತರಿಗೆ ಸ್ಮರಣಿಕೆಯೊಂದಿಗೆ ಪ್ರಮಾಣಪತ್ರ ನೀಡಿ ಸನ್ಮಾನಿಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಉಪ ನಿರ್ದೇಶಕಿ ಡಾ.ಶೈಲಜಾ ತಮ್ಮಣ್ಣವರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಬಿ.ಎನ್. ತುಕ್ಕಾರ, ಆರ್‌ಸಿಎಚ್‌ ಡಾ.ಐ.ಪಿ. ಗಡಾದ, ಡಾ.ಕಿವಡಸಣ್ಣವರ ಇದ್ದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಅನಿಲ ಕೊರಬು ಸ್ವಾಗತಿಸಿದರು. ಆರೋಗ್ಯ ಮೇಲ್ವಿಚಾರಕ ಸಿ.ಈ. ಅಗ್ನಿಹೊತ್ರಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT