ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ ಜಯಂತಿ: ಸಂವಿಧಾನವೇ ದೇಶದ ಧರ್ಮ ಗ್ರಂಥ –ಗೋವಿಂದ ಕಾರಜೋಳ

Last Updated 14 ಏಪ್ರಿಲ್ 2022, 12:30 IST
ಅಕ್ಷರ ಗಾತ್ರ

ಬೆಳಗಾವಿ: ‘ಎಲ್ಲ ವರ್ಗಗಳ ಜನರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಸಂವಿಧಾನ ರಚಿಸಿದ ಕೀರ್ತಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಅದು ದೇಶದ ಧರ್ಮಗ್ರಂಥವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಅಂಗವಾಗಿ ಗುರುವಾರ ಇಲ್ಲಿನ ಅಂಬೇಡ್ಕರ್‌ ಉದ್ಯಾನದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಫೋಟೊ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ತುಳಿತಕ್ಕೊಳಗಾದ ಜನರಿಗೆ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನ್ಯಾಯ ಒದಗಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಮುಖ್ಯವಾಹಿನಿಗೆ ಬರಬೇಕು

ಮುಖ್ಯ ಅತಿಥಿಯಾಗಿದ್ದ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ‘ಪ್ರತಿ ವರ್ಷವೂ ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಹೊಸ ವಿಚಾರಗಳ ಕುರಿತು ಚಿಂತನ-ಮಥನ ನಡೆಯಬೇಕು. ಹಿಂದುಳಿದ ವರ್ಗದ ಜನರು ಶಿಕ್ಷಣದ ಜತೆ ಜತೆಗೆ ಆರ್ಥಿಕವಾಗಿ ಸಬಲರಾಗುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಸೇರಬೇಕು’ ಎಂದು ಆಶಯ ವ್ಯಕ್ತಪಡಿಸಿದರು.

‘ಅಂಬೇಡ್ಕರ್ ಜಯಂತಿಯನ್ನು ದಿನಕ್ಕೆ ಸೀಮಿತಗೊಳಿಸದೆ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಂಡು, ಅವರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಪ್ರತಿಮೆ ಸ್ಥಾಪನೆಗೆ ಮನವಿ

‘ಶಾಹು ಮಹಾರಾಜ ಹಾಗೂ ಬುದ್ಧನ ಪ್ರತಿಮೆ ಸ್ಥಾಪನೆಗೆ ಹಿಂದಿನ ಸರ್ಕಾರದಲ್ಲಿ ಅನುದಾನ ಮೀಸಲಿಡಲಾಗಿತ್ತು. ಆ ಪ್ರತಿಮೆಗಳ ಸ್ಥಾಪನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳಬೇಕು‘ ಎಂದು ಕೋರಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅನಿಲ ಬೆನಕೆ, ‘ಅಂಬೇಡ್ಕರ್‌ ಅವರು 2 ಬಾರಿ ಬೆಳಗಾವಿಗೆ ಭೇಟಿ ನೀಡಿರುವುದು ಹೆಮ್ಮೆಯ ಸಂಗತಿ. ಅವರು ತಂಗಿದ್ದ ಕಟ್ಟಡವನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಬೇಕು’ ಎಂದು ಮನವಿ ಮಾಡಿದರು.

ಅಂಬೇಡ್ಕರ್ ಅವರ ಕುರಿತು ಸಾಹಿತಿ ಸರಜೂ ಕಾಟ್ಕರ್ ರಚಿಸಿದ ಕಿರುಹೊತ್ತಿಗೆಯನ್ನು ಸಚಿವರು ಬಿಡುಗಡೆ ಮಾಡಿದರು.

ಸಂಸದೆ ‍ಮಂಗಲಾ ಅಂಗಡಿ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಎಸ್ಪಿ ಲಕ್ಷ್ಮಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮುಖಂಡ ಮಲ್ಲೇಶ ಚೌಗಲೆ ಇದ್ದರು.

ಇದಕ್ಕೂ ಮುನ್ನ ಸಚಿವರು ಹಾಗೂ ಗಣ್ಯರು ಬುದ್ಧ ವಿಹಾರಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಅಲ್ಲಿನ ಅಂಬೇಡ್ಕರ್ ಪ್ರತಿಮೆಗೂ ಮಾಲಾರ್ಪಣೆ ಮಾಡಿದರು. ಶಾಸಕ ಅಭಯ ಪಾಟೀಲ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಪಾಲ್ಗೊಂಡಿದ್ದರು.

ಇಲ್ಲಿನ ಧರ್ಮವೀರ‌ ಸಂಭಾಜಿ ವೃತ್ತದಿಂದ ಅಂಬೇಡ್ಕರ್ ಫೋಟೊ ಮೆರವಣಿಗೆ ನಡೆಯಿತು. ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ನೂರಾರು ಮಂದಿ ಭಾಗವಹಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT