ಮಂಗಳವಾರ, ಡಿಸೆಂಬರ್ 1, 2020
26 °C

ಸೇವಾ ಭದ್ರತೆಗೆ ಆಗ್ರಹಿಸಿ ‍ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಸೇವಾ ಭದ್ರತೆ ಒದಗಿಸಬೇಕು’ ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ರಾಣಿ ಚನ್ನಮ್ಮ ವೃತ್ತದಿಂದ ಮೆರವಣಿಗೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ನಮಗೆ ಸೇವಾ ಭದ್ರತೆ ಮತ್ತು ಸೌಲಭ್ಯಗಳು ಇನ್ನೂ ದೊರೆತಿಲ್ಲ. ಅಲ್ಲದೇ, ನಮ್ಮ ಸೇವೆಯನ್ನು ಪಬ್ಲಿಕ್ ಶಾಲೆಗಳಿಗೆ ಜೋಡಿಸುವ ಪ್ರಯತ್ನವೂ ನಡೆದಿದೆ. ಸಮರ್ಪಕ ವೇತನವೂ ಸಿಗದೇ ಅತಂತ್ರ ಸ್ಥಿತಿಯಲ್ಲಿದ್ದೇವೆ. ನಮ್ಮಿಂದ ಕೆಲಸ ಮಾಡಿಸಿಕೊಳ್ಳುವ ಸರ್ಕಾರ ಸವಲತ್ತುಗಳನ್ನು ಒದಗಿಸುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ’ ಎಂದು ದೂರಿದರು.

ಸಿಐಟಿಯು ನಾಯಕಿ ಸಂಧ್ಯಾ ಕುಲಕರ್ಣಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ಹಾಗೂ ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಕೊರೊನಾ ವೇಳೆ ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಮರೆತು ಅವರನ್ನು ಅತಂತ್ರರನ್ನಾಗಿಸುವ ಪ್ರಯತ್ನ ನಡೆಸಿದೆ’ ಎಂದು ಆರೋಪಿಸಿದರು.

ಮುಖಂಡ ಜಿ.ವಿ. ಕುಲಕರ್ಣಿ ಮಾತನಾಡಿ, ‘ಸರ್ಕಾರಗಳು ಕಾರ್ಮಿಕರ ಹಿತ ಕಾಯುವ ಬದಲು ಕಾರ್ಪೊರೇಟ್ ಕಂಪನಿಗಳಿಗೆ ಮಣೆ ಹಾಕುತ್ತಿವೆ. ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಿದರೂ ಸ್ಪಂದನೆ ದೊರೆಯುತ್ತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಸರ್ಕಾರಗಳ ಧೋರಣೆ ವಿರೋಧಿಸಿ ನ.26ರಂದು ಅಖಿಲ ಭಾರತ ಮುಷ್ಕರ ನಡೆಸಲಾಗುವುದು’ ಎಂದು ತಿಳಿಸಿದರು.

ಮುಖಂಡ ಜಿ.ಎಂ. ಜೈನೆಖಾನ್, ಅಂಗನವಾಡಿ ನೌಕರರ ಸಂಘ ಜಿಲ್ಲಾ ಘಟಕದ ಅಧ್ಯಕ್ಷೆ ದೊಡ್ಡವ್ವ ಪೂಜಾರಿ, ಮಂದಾ ನೇವಗಿ, ಭಾರತಿ ಜೋಗನ್ನವರ ಸಿಐಟಿಯು ಮುಖಂಡ ಎಲ್.ಎಸ್. ನಾಯಕ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.