ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: 80 ಕಾರ್ಯಕ್ರಮಗಳ ಕ್ರಿಯಾಯೋಜನೆಗೆ ಅನುಮೋದನೆ

Last Updated 13 ಸೆಪ್ಟೆಂಬರ್ 2021, 13:12 IST
ಅಕ್ಷರ ಗಾತ್ರ

ಬೆಳಗಾವಿ: ‘ದೇಶದಾದ್ಯಂತ ಆಜಾದಿ ಕಾ ಅಮೃತ ಮಹೋತ್ಸವ ವರ್ಷಾಚರಣೆ ನಡೆಯುತ್ತಿದೆ. ನೆಹರೂ ಯುವ ಕೇಂದ್ರದವರೂ ಸ್ವಾತಂತ್ರ್ಯೋತ್ಸವಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಆದ್ಯತೆ ಕೊಡಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನೆಹರೂ ಯುವ ಕೇಂದ್ರದ ವತಿಯಿಂದ ಕೂಡ ಆಜಾದಿ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಬಗೆಯ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದಲ್ಲದೇ ಜಿಲ್ಲಾಡಳಿತ ವತಿಯಿಂದ ವರ್ಷವಿಡೀ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳೊಂದಿಗೆ ಕೈ ಜೋಡಿಸಬೇಕು’ ಎಂದು ತಿಳಿಸಿದರು.

‘ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯ ಅನ್ವಯ ಹಮ್ಮಿಕೊಳ್ಳಲಾಗಿರುವ ಎಲ್ಲ ಕಾರ್ಯಕ್ರಮಗಳ ಕುರಿತು ಸಮರ್ಪಕವಾಗಿ ದಾಖಲೆಗಳನ್ನು ನಿರ್ವಹಿಸಬೇಕು. ಪ್ರತಿಯೊಂದನ್ನೂ ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ನಡೆಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ನೆಹರೂ ಯುವ ಕೇಂದ್ರದ ಅಧಿಕಾರಿ ರೋಹಿತ್ ಕಲ್ರಾ, 2021–2022ನೇ ಸಾಲಿನ ಕ್ರಿಯಾ ಯೋಜನೆಯ ಕುರಿತು ಮಾಹಿತಿ ನೀಡಿದರು. ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗುವ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮಗಳಲ್ಲೂ ಸಕ್ರಿಯವಾಗಿ ಭಾಗವಹಿಸಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಯುವಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹಮ್ಮಿಕೊಳ್ಳಲಾಗಿರುವ ವಿವಿಧ ಬಗೆಯ ಕಾರ್ಯಕ್ರಮಗಳು, ರಾಷ್ಟ್ರೀಯ ದಿನಾಚರಣೆಗಳು, ಯುವ ಕ್ಲಬ್ ಚಟುವಟಿಕೆಗಳು, ಯುವ ಪ್ರಶಸ್ತಿಗಳ ಪ್ರದಾನ, ಶಿಬಿರಗಳು, ಜಾಗೃತಿ ಮತ್ತು ಅವುಗಳಿಗೆ ಮೀಸಲಿಟ್ಟಿರುವ ಅನುದಾನದ ಬಗ್ಗೆ ಮಾಹಿತಿ ನೀಡಿದರು.

ಒಟ್ಟು ₹ 10.29 ಲಕ್ಷ ವೆಚ್ಚದಲ್ಲಿ ವರ್ಷದಲ್ಲಿ 80 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಮೋದನೆ ನೀಡಲಾಯಿತು.

ಮಹಿಳಾ ಕಲ್ಯಾಣ ಸಂಸ್ಥೆ ವತಿಯಿಂದ ನಡೆಸಲಾಗುತ್ತಿರುವ ಕರಗುಪ್ಪಿ ಸಮುದಾಯ ಬಾನುಲಿ ಕೇಂದ್ರವು ನೆಹರೂ ಯುವ ಕೇಂದ್ರದ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಿದ್ಧವಿರುವುದಾಗಿ ಬಾನುಲಿ ಕೇಂದ್ರದ ಸುರೇಖಾ ಪಾಟೀಲ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಗುರುನಾಥ ಕಡಬೂರ, ಕೌಶಲ ಅಭಿವೃದ್ಧಿ ಇಲಾಖೆಯ ಅಧಿಕಾರಿ ಬಸವಪ್ರಭು ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT