ಬೆಳಗಾವಿ: ‘ಪರಿಶಿಷ್ಟರ ಮೇಲೆ ದೌರ್ಜನ್ಯ ನಡೆದ ಕುರಿತು ದೂರು ದಾಖಲಾದರೆ, ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಎಚ್ಚರಿಕೆ ಕೊಟ್ಟರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಎಸ್‌ಸಿ, ಎಸ್‌ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಈ ಸಭೆಗೆ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸಭೆಗೆ ಹಾಜರಾದವರು ಅನುಪಾಲನಾ ವರದಿ ಸಲ್ಲಿಸಬೇಕು. ನಿಯಮ ಪಾಲಿಸದವರ ವಿರುದ್ಧ ಕ್ರಮ ಅನಿವಾರ್ಯ’ ಎಂದರು.
‘ನ್ಯಾಯ ಕೋರಿ ತಮ್ಮ ಕಚೇರಿಗೆ ಆಗಮಿಸುವ ಜನರೊಂದಿಗೆ ಅಧಿಕಾರಿಗಳು, ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕೋರಿ ಪರಿಶಿಷ್ಟರು ಸಲ್ಲಿಸುವ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡಬೇಕು’ ಎಂದು ಹೇಳಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ‘ತುರ್ತು ಸಂದರ್ಭ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ತ್ವರಿತವಾಗಿ ವೈದ್ಯಕೀಯ ಚಿಕಿತ್ಸೆ ನೀಡಬೇಕು’ ಎಂದು ನಿರ್ದೇಶನ ಕೊಟ್ಟರು.
ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ನಬ್ಯಾಂಗ್, ‘ನಗರವೂ ಸೇರಿದಂತೆ
ಜಿಲ್ಲೆಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.
‘ಜಿಲ್ಲೆಯಲ್ಲಿ ವಿವಿಧೆಡೆ ಪರಿಶಿಷ್ಟರಿಂದ ಸ್ಮಶಾನಭೂಮಿಗೆ ಬೇಡಿಕೆ ಇದೆ. ಅಗತ್ಯವಿರುವ ಕಡೆ ಸ್ಮಶಾನಭೂಮಿ ಮಂಜೂರುಗೊಳಿಸಿ ಅಭಿವೃದ್ಧಿಪಡಿಸಬೇಕು. ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು’ ಎಂದು ಮುಖಂಡ ಮಲ್ಲೇಶ ಚೌಗಲಾ ಮನವಿ ಮಾಡಿದರು.
ಸಮಿತಿ ನಾಮನಿರ್ದೇಶಿತ ಸದಸ್ಯರಾದ ಕರೆಪ್ಪ ಗುಡೆನ್ನವರ, ವಿಜಯ ತಳವಾರ, ಬಸಪ್ಪ ತಳವಾರ, ಬಸವರಾಜ ಪಾಯಟ್ಟಿ, ನಾಗಪ್ಪ ನರಗಟ್ಟಿ ಮಾತನಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಲಯದ ಅಧೀಕ್ಷಕ ರವೀಂದ್ರ ಗಡಾದಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಸಮಾಜಕಲ್ಯಾಣ ಇಲಾಖೆ ಜಂಟಿನಿರ್ದೇಶಕ ರಾಮನಗೌಡ ಕನ್ನೋಳ್ಳಿ ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಇದ್ದರು.
‘ಅದ್ದೂರಿಯಾಗಿ ಮಹರ್ಷ ವಾಲ್ಮೀಕಿ ಜಯಂತಿ ಆಚರಣೆ’
‘ನಗರದಲ್ಲಿ ಅ.17ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಡಿ.ಸಿ ಮೊಹಮ್ಮದ್ ರೋಷನ್ ಸೂಚಿಸಿದರು. ಇಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ‘ಸ್ವಾತಂತ್ರ್ಯ ಹೋರಾಟದಲ್ಲಿ ಸಂಗೊಳ್ಳಿ ರಾಯಣ್ಣನ ಜತೆಗೂಡಿ ಬ್ರಿಟಿಷರ ವಿರುದ್ಧ ಹೋರಾಡಿ ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆಗೆ ಒಳಗಾದ ವಾಲ್ಮೀಕಿ ಸಮುದಾಯದ ನಾಯಕರ ಹೆಸರನ್ನು ಕಾರ್ಯಕ್ರಮದ ವೇದಿಕೆಗೆ ಇರಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.