ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣದಿಂದ ಮುಖ್ಯವಾಹಿನಿಗೆ ಬನ್ನಿ: ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಡಿ.ಸಿ.

ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಡಿ.ಸಿ.
Last Updated 5 ಏಪ್ರಿಲ್ 2022, 10:48 IST
ಅಕ್ಷರ ಗಾತ್ರ

ಬೆಳಗಾವಿ: ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಹಾಗೂ ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿನ ಸಂಗಮೇಶ್ವರ ನಗರದ ಬಾಬು ಜಗಜೀವನರಾಂ ಉದ್ಯಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಅವರ 115ನೇ ಜಯಂತಿ ಅಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಶಿಕ್ಷಣವನ್ನು ಮೂಲ ಅಸ್ತ್ರವಾಗಿಸಿಕೊಂಡು ಚೆನ್ನಾಗಿ ಓದಿ ಉನ್ನತ ಹುದ್ದೆ ಪಡೆದು ಸಮಾಜ ಸೇವೆ ಮಾಡಬೇಕು. ಆಗ ಮಾತ್ರ ಅಸ್ಪೃಶ್ಯತೆ ನಿವಾರಣೆ ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

‘ಜಗಜೀವನರಾಂ ದಕ್ಷ ಆಡಳಿತಗಾರರಾಗಿದ್ದರು. ಮೂರು ದಶಕಗಳವರೆಗೆ ಸಂಪುಟ ದರ್ಜೆ ಸಚಿವರಾಗಿ, ಸಂಸದರಾಗಿ, ಉಪಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದು ಅವರ ದಕ್ಷತೆಯ ಪ್ರತೀಕವಾಗಿದೆ. ಅವರು ಅಸ್ಪೃಶ್ಯತೆ ನಿವಾರಣೆಯ ಹರಿಕಾರರು’ ಎಂದು ಸ್ಮರಿಸಿದರು.

‘ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಸಮಾಜ ಕಲ್ಯಾಣ ಇಲಾಖೆ ಜೊತೆಗೆ ಎಲ್ಲ ಇಲಾಖೆಯ ಅಧಿಕಾರಿಗಳು ಕೂಡ ಮಾಡಬೇಕು. ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳ ಬಗ್ಗೆ ತಿಳಿಸಬೇಕು’ ಎಂದರು.

ಉಪನ್ಯಾಸ ನೀಡಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಪ್ರಕಾಶ ಎಸ್. ಕಟ್ಟೀಮನಿ, ‘ಡಾ.ಬಿ.ಆರ್. ಅಂಬೇಡ್ಕರ್‌ ಮತ್ತು ಬಾಬು ಜಗಜೀವನರಾಂ ಅವರು ದಲಿತ ನಾಯಕರಲ್ಲ; ಅವರು ಇಡೀ ಸಮಾಜದ ನಾಯಕರು. ಅವರು ಎಲ್ಲರಿಗಾಗಿ ಹೋರಾಡಿದ್ದಾರೆ. ಸಂವಿಧಾನ ಎಂದರೆ ದಲಿತರ ಮೀಸಲಾತಿ ಎನ್ನುವುದಷ್ಟೆ ಅಲ್ಲ. ಮೀಸಲಾತಿ ಎನ್ನುವುದು ಸಂವಿಧಾನದ ಒಂದು ಭಾಗ ಮಾತ್ರ’ ತಿಳಿಸಿದರು.

ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾದಿ, ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ್ ಘಾಳಿ, ಮಹಾನಗರ ಪಾಲಿಕೆಯ ಉಪ ಆಯುಕ್ತೆ (ಆಡಳಿತ) ಭಾಗ್ಯಶ್ರೀ ಹುಗ್ಗಿ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ (ಆಡಳಿತ) ಭೀಮಪ್ಪ ಲಾಳಿ, ಮಾದಿಗ ಮಿಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ದೊಡಮನಿ, ಮುಖಂಡರಾದ ಮಲ್ಲೇಶ ಚೌಗಲಾ, ಯಲ್ಲಪ್ಪ ಹುದಲಿ, ಬಾಬು ಪೂಜಾರಿ ಪಾಲ್ಗೊಂಡಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ಸ್ವಾಗತಿಸಿದರು. ಸೂಪರಿಂಟೆಂಡೆಂಟ್‌ ಎಂ.ಬಿ. ಹೊಸಮನಿ ನಿರೂಪಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬಾಬೂಜಿ ಫೋಟೊ ಮೆರವಣಿಗೆ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮೊದಲಾದವರು ಪಾಲ್ಗೊಂಡಿದ್ದರು.

ಸನ್ಮಾನ

ಪಿಯುಸಿ, ಎಲ್‌ಎಲ್‌ಬಿ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಅವರನ್ನು ಸನ್ಮಾನಿಸಿದ್ದರಿಂದ ಬಾಬು ಜಗಜೀವನರಾಂ ಜಯಂತಿ ಆಚರಣೆ ಅರ್ಥಪೂರ್ಣವಾಗಿದೆ.

–ಎಂ,ಜಿ. ಹಿರೇಮಠ, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT