ಬೆಳಗಾವಿ: ‘ಸರ್ಕಾರಿ ಪ್ರಾಯೋಜಿತ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಬ್ಯಾಂಕ್ ಶಾಖೆಗಳನ್ನು ಪ್ರಾರಂಭಿಸಲು ಮುಂದಾಗಬೇಕು’ ಎಂದು ಸಂಸದ ಜಗದೀಶ ಶೆಟ್ಟರ್ ಲೀಡ್ ಬ್ಯಾಂಕುಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಬ್ಯಾಂಕರುಗಳ ಸಭೆಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣರಿಗೆ ಬ್ಯಾಂಕಿಂಗ್ ವ್ಯವಹಾರಗಳ ಅರಿವು ಮೂಡಿಸಬೇಕು. ಈ ಬಗ್ಗೆ ಮುಂದಿನ ಸಭೆಯಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು’ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಮಾತನಾಡಿ, ‘ಬ್ಯಾಂಕುಗಳಲ್ಲಿ ಬಹುದಿನದಿಂದ ಬಾಕಿ ಇರುವ ಸರ್ಕಾರಿ ಯೋಜನೆಯ ಫಲಾನುಭವಿಗಳ ವಿವರವನ್ನು ಆದಷ್ಟು ಬೇಗನೆ ಪರಿಶೀಲಿಸಿ, ಕ್ರಮ ತೆಗೆದುಕೊಳ್ಳಬೇಕು. ರೈತ ಹಾಗೂ ಪರಿಶಿಷ್ಟ ಗ್ರಾಹಕರ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬೇಕು’ ಎಂದು ತಿಳಿಸಿದರು.
ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯಸ್ಥ ಸುರೇಶ ಪೈ ವರದಿ ನೀಡಿದರು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿ ಪಿ.ಬಿಸ್ವಾಸ್, ನಬಾರ್ಡ್ ಡಿಡಿಎಂ ಅಭಿನವ ಯಾದವ, ಜಿಲ್ಲೆಯ ಎಲ್ಲ ಬ್ಯಾಂಕ್ ಪ್ರತಿನಿಧಿಗಳು ಇದ್ದರು.