ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿತ್ತನೆ ಬೀಜಗಳ ಕೊರತೆಯಾಗದಂತೆ ಎಚ್ಚರವಹಿಸಿ

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಂಕರಗೌಡ ಪಾಟೀಲ ಸೂಚನೆ
Last Updated 19 ಜೂನ್ 2019, 13:24 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿತ್ತನೆ ಬೀಜಗಳ ಕೊರತೆಯಾಗದಂತೆ ನೋಡಿಕೊಳ್ಳಿ. ಕೃಷಿ ಕಾರ್ಯಗಳ ಕುರಿತು ರೈತರಿಗೆ ಅಗತ್ಯ ಸಲಹೆ ನೀಡಿ’ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಂಕರಗೌಡ ಪಾಟೀಲ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಬುಧವಾರ ನಡೆದ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ಮಳೆಯ ಕೊರತೆ ಹಿನ್ನೆಲೆಯಲ್ಲಿ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಕುರಿತು ಪ್ರಶ್ನಿಸಿದರು.

ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಬಿ. ಕಲ್ಯಾಣಿ ಮಾತನಾಡಿ, ‘ಈವರೆಗೆ 240 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, 77 ಮಿ.ಮೀ. ಮಳೆ ಮಾತ್ರ ಸುರಿದಿದೆ. ತಾಲ್ಲೂಕಿನಲ್ಲಿ 51,680 ಹೆಕ್ಟೇರ್‌ ಭೂಮಿಯಿದ್ದು, 9,130 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆ ಮಾಡಲಾಗಿದೆ. ಇದೇ 20ರ ನಂತರ ಮಳೆಯಾಗುವ ನಿರೀಕ್ಷೆ ಇದೆ’ ಎಂದು ಮಾಹಿತಿ ನೀಡಿದರು.

‘ತಾಲ್ಲೂಕಿನಲ್ಲಿ 13 ಕೇಂದ್ರಗಳನ್ನು ತೆರೆದು ಬೀಜ ವಿತರಣೆ ಮಾಡಲಾಗುತ್ತಿದೆ. ಸೊಯಾಬಿನ್‌, ಭತ್ತ ಹಾಗೂ ಗೋವಿನಜೋಳದ ಬೀಜಗಳನ್ನು ವಿತರಿಸಲಾಗುತ್ತಿದೆ. ಇವುಗಳನ್ನು ಜುಲೈ 15ರವರೆಗೆ ಬಿತ್ತನೆ ಮಾಡಬಹುದಾಗಿದೆ. ಇಲಾಖೆಯಲ್ಲಿಬೀಜಗಳ ಕೊರತೆ ಇಲ್ಲ’ ಎಂದು ತಿಳಿಸಿದರು.

ಪಠ್ಯಪುಸ್ತಕದಲ್ಲಿ ದೋಷ:

ಸದಸ್ಯ ಅಪ್ಪಾಸಾಹೇಬ ಕೀರ್ತನೆ ಮಾತನಾಡಿ, ‘1ರಿಂದ 10ನೇ ತರಗತಿಯ ಮರಾಠಿ ಮಾಧ್ಯಮದ ಪಠ್ಯಪುಸ್ತಕಗಳಲ್ಲಿ ತುಂಬಾ ವ್ಯಾಕರಣ ದೋಷಗಳು ಇವೆ. ಕೂಡಲೇ, ಇವುಗಳನ್ನು ಸರಿಪಡಿಸಬೇಕು’ ಎಂದು ಒತ್ತಾಯಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೀಲಾವತಿ ಹಿರೇಮಠ ಮಾತನಾಡಿ, ‘ತಪ್ಪುಗಳು ಉಂಟಾಗಿರುವುದು ನಿಜ. ಈ ಬಗ್ಗೆ ಗಮನಕ್ಕೆ ಬಂದಿದ್ದು, ಇಲಾಖೆಗೆ ಮಾಹಿತಿ ನೀಡಲಾಗಿದೆ. ಪರಿಷ್ಕರಣೆ ಮಾಡಿ ಬೇರೆ ಪುಸ್ತಕಗಳನ್ನು ಸರಬರಾಜು ಮಾಡುವಂತೆ ಕೂಡ ಮನವಿ ಮಾಡಲಾಗಿದೆ’ ಎಂದು ತಿಳಿಸಿದರು. ತಾಲ್ಲೂಕಿನಲ್ಲಿ ಶೇ.95 ರಷ್ಟು ಪಠ್ಯಪುಸ್ತಕಗಳ ವಿತರಣೆ ಮಾಡಲಾಗಿದೆ. ಪುಸ್ತಕಗಳ ಕೊರತೆ ಕುರಿತು ದೂರು ಬಂದರೇ, ಮತ್ತೆ ತರಿಸಿ ಕೊಡಲಾಗುವುದು’ ಎಂದು ಮಾಹಿತಿ ನೀಡಿದರು.

ಅಂಗನವಾಡಿಗಳ ಅಭಿವೃದ್ಧಿಗೆ ಕ್ರಮ:

‘ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಿಸುತ್ತಿರುವುದರಿಂದ ಅಂಗನವಾಡಿಗಳಿಗೆ ಹಿನ್ನಡೆಯಾಗಲಿದೆ’ ಎಂಬ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೇವತಿ ಹೊಸಮಠ, ‘ಇದರಿಂದ ಅಂಗನವಾಡಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದರು.

‘ಅಂಗನವಾಡಿಗಳ ಅಭಿವೃದ್ಧಿಗೆ ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುವುದು. ಸೌಕರ್ಯದ ಅಗತ್ಯವಿರುವ ತಾಲ್ಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗಾಗಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ಕೂಡಲೇ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲಾಗುವುದು. ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಭರ್ತಿ ಮಾಡಿಕೊಳ್ಳುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ತಿಳಿಸಿದರು.

ಅಧಿಕಾರಿಗಳಿಗೆ ನೋಟಿಸ್‌:

‘ಪದೇ–ಪದೇ ಸಭೆಗೆ ಗೈರು ಹಾಜರಾಗುತ್ತಿರುವ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನೋಟಿಸ್‌ ನೀಡುವಂತೆ ಸದಸ್ಯರು ಆಗ್ರಹಿಸಿದರು. ಗೈರಾದ ಅಧಿಕಾರಿಗಳಿಗೆ ನೋಟಿಸ್‌ ನೀಡುವಂತೆ ತಾಲ್ಲೂಕು ಪಂಚಾಯ್ತ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಜಾ ಪಾಟೀಲ ಸೂಚಿಸಿದರು.

ಉಪಾಧ್ಯಕ್ಷ ಮಾರುತಿ ಸನದಿ ಸೇರಿ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT