ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಸೋನಿಯಾ, ರಾಹುಲ್‌ಗೆ ಸಮನ್ಸ್‌: ಕಾಂಗ್ರೆಸ್‌ ಪ್ರತಿಭಟನೆ

Last Updated 17 ಜೂನ್ 2022, 8:48 IST
ಅಕ್ಷರ ಗಾತ್ರ

ಬೆಳಗಾವಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ (ಇ.ಡಿ) ದುರ್ಬಳಕೆ ಮಾಡಿಕೊಂಡು ರಾಹುಲ್‌ ಗಾಂಧಿ ಅವರ ಮೇಲೆ ದ್ವೇಷ ಸಾಧಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ಮಾಡಿದರು.

ಜಿಲ್ಲಾ ಕಾಂಗ್ರೆಸ್‌ನ ಬೆಳಗಾವಿ ಗ್ರಾಮೀಣ ಹಾಗೂ ನಗರ ಸಮಿತಿಯ ಆಯೋಜಿಸಿದ ಮೆರವಣಿಗೆಯು ಇಲ್ಲಿನ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದರು.

‘ಪ್ರಧಾನಿ ನರೇಂದ್ರ ಮೋದಿ ಸರ್ಕಾರಿ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು, ಕೃತಕವಾಗಿ ಸೃಷ್ಟಿಸಿದ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವಂತೆ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ವಿನಾಕಾರಣ ಕಿರುಕುಳ ನೀಡುತ್ತಿರುವ ಕ್ರಮ ಸರಿಯಲ್ಲ’ ಎಂದು ಪಕ್ಷದ ಮುಖಂಡ ಆರ್.‌ಬಿ. ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಕೋಮುವಾದ ಮತ್ತು ರಾಷ್ಟ್ರ ನಾಯಕರನ್ನು ತೇಜೋವಧೆ ಮಾಡುವುದು ಹೆಚ್ಚಾಗಿದೆ. ಕಾರಣ ಪ್ರಧಾನಿ ಮೋದಿ ಅವರು ಎಚ್ಚರ ವಹಿಸಬೇಕು. ಇಲ್ಲದಿದ್ದರೆ ದೇಶದಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದೂ ಎಚ್ಚರಿಸಿದರು.

ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್‌, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ, ಮುಖಂಡರಾದ ಪಂಚನಗೌಡ ದ್ಯಾಮನಗೌಡರ, ಮಲಗೌಡ ಪಾಟೀಲ, ಶೋಯಬ್‌ ಅಪ್ತಾರ್‌, ಇರ್ಫಾನ್‌ ಅಪ್ತಾರ್‌, ಮನಸೂರ್‌ ಸೈಯದ್‌, ಕಾರ್ತಿಕ ಪಾಟೀಲ, ಸಿದ್ದಿಕ ಅಂಕಲಗಿ, ಬಸವರಾಜ ಶಿಗ್ಗಾವಿ, ರಾಜಾಸಲಿ ಮೊಕಾಶಿ, ಆಯೇಷಾ ಸನದಿ ಸೇರಿದಂತೆ ವಿವಿಧ ಘಟಕಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT