ಮಂಗಳವಾರ, ಏಪ್ರಿಲ್ 13, 2021
23 °C
ಬೆಳಗಾವಿಯಲ್ಲಿ ಉತ್ತಮ ಸಾಧನೆ: ಡಿ.ಸಿ

Covid-19: ಬೆಳಗಾವಿಯಲ್ಲಿ ಉತ್ತಮ ಸಾಧನೆ, ನಿತ್ಯ 30,000 ಮಂದಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಕೋವಿಡ್-19 ಲಸಿಕಾಕರಣ ಅಭಿಯಾನದಲ್ಲಿ ಜಿಲ್ಲೆಯು ರಾಜ್ಯದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಜನರ ಸಹಕಾರದಿಂದ ಕೋವಿಡ್ ವಿರುದ್ಧದ ಹೋರಾಟದಲ್ಲಿ ಒಂದು ಹೆಜ್ಜೆ ಮುಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌ ತಿಳಿಸಿದ್ದಾರೆ.

‘ಏ.7ರಂದು ಒಂದೇ ದಿನ ಮೊದಲ ಹಾಗೂ 2ನೇ ಡೋಸ್ ಸೇರಿದಂತೆ 26,657 ಜನರಿಗೆ ಲಸಿಕೆ ನೀಡವ ಮೂಲಕ ರಾಜ್ಯದ ಗಮನ ಸೆಳೆದಿದೆ. ಇವರ ಪೈಕಿ 26,067 ಮಂದಿ ಲಸಿಕೆಯ ಮೊದಲ ಡೋಸ್ ಪಡೆದಿರುವುದು ಗಮನಾರ್ಹ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 3,07,867 ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಇದರಲ್ಲಿ 60 ವರ್ಷ ಮೇಲಿನವರು, 45 ವರ್ಷ ಮೇಲಿನವರು (ಆರೋಗ್ಯ ಸಮಸ್ಯೆ ಹೊಂದಿರುವ) ಆರೋಗ್ಯ ಕಾರ್ಯಕರ್ತರು ಹಾಗೂ ಪೊಲೀಸ್, ಕಂದಾಯ, ಜಿಲ್ಲಾ ಪಂಚಾಯ್ತಿ ಸಿಬ್ಬಂದಿ ಸೇರಿದಂತೆ ಕೊರೊನಾ ಮುಂಚೂಣಿ ಯೋಧರು ಸೇರಿದ್ದಾರೆ. ಜಿಲ್ಲೆಯಲ್ಲಿ ಭಾಗಶಃ ತಾಲ್ಲೂಕುಗಳಲ್ಲಿ ಚುನಾವಣಾ ಕಾರ್ಯ ನಡೆಯುತ್ತಿದ್ದು, ಇದರ ಮಧ್ಯೆಯೂ ಜನರ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಲಸಿಕಾಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ. ರಾಜ್ಯದ ಗಡಿಭಾಗದಲ್ಲಿ ಇರುವುದರಿಂದ ಕೋವಿಡ್ ಲಸಿಕಾಕರಣಕ್ಕೆ ಹೆಚ್ಚಿನ ಗಮನ‌ಹರಿಸಲಾಗುತ್ತಿದೆ. ಹೆಚ್ಚು ಹೆಚ್ಚು ಜನರಿಗೆ ಲಸಿಕೆ ನೀಡುವ ಉದ್ಧೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಮತ್ತು ಆರೋಗ್ಯ ಇಲಾಖೆಯ ವತಿಯಿಂದ ಶ್ರಮಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ನಿತ್ಯ 30ಸಾವಿರ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಜನರ ಸಹಕಾರದಿಂದ ಅಭಿಯಾನದಲ್ಲಿ ಜಿಲ್ಲೆ ಉತ್ತಮ ಸಾಧನೆ ತೋರಲು ಸಾಧ್ಯವಾಗಿದೆ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗಿಲ್ಲ. ಆದ್ದರಿಂದ ಲಸಿಕೆ ಪಡೆಯುವ ಮೂಲಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಕಾಲ ಕಾಲಕ್ಕೆ ಸರ್ಕಾರ ಹೊರಡಿಸುವ ಮಾರ್ಗಸೂಚಿ ಪ್ರಕಾರ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು