ಶುಕ್ರವಾರ, ಮೇ 7, 2021
26 °C

ಮತದಾರರನ್ನು ಕರೆತರಲು ವಾಹನ ವ್ಯವಸ್ಥೆಗೆ ಅವಕಾಶವಿಲ್ಲ: ಡಾ.ಕೆ. ಹರೀಶ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ಏ.17ರಂದು ನಡೆಯಲಿದೆ. ಅಂದು ಯಾವುದೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅಥವಾ ಕಾರ್ಯಕರ್ತರು ಮತದಾರರನ್ನು ಮತಗಟ್ಟೆಗೆ ಕರೆತರಲು ವಾಹನ ವ್ಯವಸ್ಥೆ ಮಾಡಲು ಅವಕಾಶವಿಲ್ಲ’ ಎಂದು ಜಿಲ್ಲಾ  ಚುನಾವಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಮತದಾರರನ್ನು ಮತಗಟ್ಟೆಗೆ ಕರೆತರಲು ವಾಹನ‌ ವ್ಯವಸ್ಥೆ ಕಲ್ಪಿಸುವುದು ಮತದಾರರಿಗೆ ಆಮಿಷದ ವ್ಯಾಪ್ತಿಗೆ  ಬರುತ್ತದೆ. ಹೀಗಾಗಿ, ನಿಯಮ ಪಾಲಿಸಬೇಕು’ ಎಂದು ಸೂಚಿಸಿದ್ದಾರೆ.

‘ಚುನಾವಣಾ ಆಯೋಗದ ನಿರ್ದೇಶನ ಹಾಗೂ ಕೋವಿಡ್-19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಸೋಂಕು ಹರಡುವಿಕೆಯ ಬಗ್ಗೆ ಯಾವುದೇ ಆತಂಕವಿಲ್ಲದೇ ನಿರ್ಭೀತಿಯಿಂದ ಬಂದು ಮತ ಚಲಾಯಿಸಬೇಕು. ಮತಗಟ್ಟೆ ಸೇರಿದಂತೆ ಮತದಾನ ಪ್ರಕ್ರಿಯೆ ನಡೆಯುವ ಎಲ್ಲ ಕಡೆಗಳಲ್ಲೂ ಸೋಂಕು ನಿವಾರಕ ದ್ರಾವಣ ಸಿಂಪಡಿಸುವುದು ಮೊದಲಾದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ತೆಗೆದುಕೊಳ್ಳಲಾಗಿದೆ. ಸಿಬ್ಬಂದಿಗೂ ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಹಾಗೂ ಅಂತರ ಕಾಯ್ದುಕೊಳ್ಳುವಿಕೆ ಕುರಿತು ತರಬೇತಿ ನೀಡಲಾಗಿದೆ. ಅಗತ್ಯವಿರುವ ಸಾಮಗ್ರಿಗಳನ್ನು ಕೂಡ ಪೂರೈಸಲಾಗುವುದು’ ಎಂದು ತಿಳಿಸಿದ್ದಾರೆ.

‘ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತದಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಯಾವುದೇ ರೀತಿಯ ಆಸೆ-ಆಮಿಷಗಳಿಗೆ ಒಳಗಾಗದೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು’ ಎಂದು ಕೋರಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು