ಶುಕ್ರವಾರ, ಆಗಸ್ಟ್ 6, 2021
21 °C
ಗರಿಗೆದರಿದ ಚಟುವಟಿಕೆಗಳು

ಬೆಳಗಾವಿ: ಡಿಸಿಸಿ ಬ್ಯಾಂಕ್‌ ಚುನಾವಣೆ ವೇಳಾಪಟ್ಟಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ) ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಆ.7ರಂದು ಚುನಾವಣೆ ನಿಗದಿಯಾದ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಮಟ್ಟದಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಅಧಿಸೂಚನೆ ಪ್ರಕಾರ, ಜುಲೈ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 31ರಂದು ಚುನಾವಣಾಧಿಕಾರಿ ನಾಮಪತ್ರಗಳನ್ನು ಪರಿಶೀಲಿಸುವರು. ಆ.1 ಉಮೇದುವಾರರು ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಆ.7ರಂದು ಚುನಾವಣೆ ನಡೆಯಲಿದೆ.

ಮೇ 29ರಂದು ಚುನಾವಣೆ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಕೊರೊನಾ ಸೋಂಕಿನ ಭೀತಿಯಿಂದಾಗಿ ಜಾರಿಯಾದ ಲಾಕ್‌ಡೌನ್‌ನಿಂದಾಗಿ ಆ ಅಧಿಸೂಚನೆ ಹಿಂಪಡೆಯಲಾಗಿದೆ. ಈಚೆಗೆ ಮತ್ತೊಂದು ವೇಳಾಪಟ್ಟಿ ನಿಗದಿಪಡಿಸಿ ಮತ್ತೊಂದು ಅಧಿಸೂಚನೆ ಹೊರಡಿಸಲಾಗಿದೆ. ಇದರ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.

ಬಿಮ್ಸ್‌ ಆಡಳಿತಾಧಿಕಾರಿ ಎಸ್.ಎಸ್. ಬಳ್ಳಾರಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಸಹಕಾರ ಚುನಾವಣಾ ಪ್ರಾಧಿಕಾರದ ನಿರ್ದೇಶನಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಈ ಮೊದಲು ಕಾಡಾ ಉಪ ಅಡಳಿತಾಧಿಕಾರಿ ಜಯಶ್ರೀ ಶಿಂತ್ರಿ ಅವರನ್ನುಚ ಚುನಾವಣಾ ಅಧಿಕಾರಿ ಎಂದು ನೇಮಕ ಮಾಡಲಾಗಿತ್ತು. ಬಳಿಕ ಪರಿಷ್ಕೃತ ಆದೇಶ ಮಾಡಲಾಗಿದೆ.

‌16 ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

2015ರಲ್ಲಿ ನಡೆದ ಚುನಾವಣೆಯಲ್ಲಿ ರಮೇಶ ಕತ್ತಿ, ಲಕ್ಷ್ಮಣ ಸವದಿ, ಆನಂದ ಮಾಮನಿ, ಮಹಾಂತೇಶ ದೊಡ್ಡಗೌಡರ, ಅರವಿಂದ ಪಾಟೀಲ ಮೊದಲಾದ ಪ್ರಮುಖರು ಆಯ್ಕೆಯಾಗಿದ್ದರು. ಬಳಿಕ, ಬಿಜೆಪಿಯ ರಮೇಶ ಕತ್ತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಜಿಲ್ಲೆಯಲ್ಲಿ ಬದಲಾದ ರಾಜಕೀಯ ಸನ್ನಿವೇಶನದಲ್ಲಿ ಈ ಬಾರಿಯ ಚುನಾವಣೆಯು ಕುತೂಹಲ ಮೂಡಿಸಿದೆ. ಸದ್ಯ ಅಧ್ಯಕ್ಷರಾದ ರಮೇಶ ಕತ್ತಿ ಅವರು ರಾಜ್ಯಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ ಸಿಗದೆ ಬೇಸರಗೊಂಡಿದ್ದಾರೆ. ಹೋದ ಚುನಾವಣೆ ಕಾಲಕ್ಕೆ ಕಾಂಗ್ರೆಸ್‌ನಲ್ಲಿದ್ದ ರಮೇಶ ಜಾರಕಿಹೊಳಿ ಈಗ ಬಿಜೆಪಿಯಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದಾರೆ. ಅವರು ಯಾರಿಗೆ ಬೆಂಬಲ ನೀಡುತ್ತಾರೆ ಎನ್ನುವುದು ಕೂಡ ಕುತೂಹಲಕ್ಕೆ ಕಾರಣವಾಗಿದೆ.

‘ರಾಜ್ಯದ ವಿವಿಧ ಜಿಲ್ಲೆಯ ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಯ ಅವಧಿ ಮುಗಿದಿದ್ದು, ಕೊರೊನಾ ಭೀತಿ ಇರುವುದರಿಂದಾಗಿ ಚುನಾವಣೆಯನ್ನು 6 ತಿಂಗಳು ಮುಂದೂಡಲಾಗುವುದು’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ಈಚೆಗೆ ತಿಳಿಸಿದ್ದರು. ಈ ನಡುವೆಯೇ ವೇಳಾಪಟ್ಟಿ ಪ್ರಕಟವಾಗಿದೆ. ಪ್ರಕ್ರಿಯೆಗಳನ್ನು ನಡೆಸಲು ಸಹಕಾರ ಇಲಾಖೆಯು ಸಿದ್ಧತೆ ಆರಂಭಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು