ಸೋಮವಾರ, ಜನವರಿ 17, 2022
20 °C

ವಸತಿ ಶಾಲೆಗಳಲ್ಲಿ ನಡೆಯದ ತರಗತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಿಂದ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಮಕ್ಕಳಿದ್ದಾರೆ. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಅವರಿಗೆ ತರಗತಿಗಳು ನಡೆಯುತ್ತಿಲ್ಲ.

ಕಿತ್ತೂರಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಸೈನಿಕ ಶಾಲೆಯಲ್ಲಿ ಕೋವಿಡ್ ಸೋಂಕು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಲೆಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಆದರೆ, ವಸತಿ ಶಾಲೆಗಳನ್ನು ಬಂದ್ ಮಾಡಿಲ್ಲ. ಅಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವುದು ಸವಾಲಿನ ಸಂಗತಿಯಾಗಿದೆ ಎನ್ನುತ್ತಾರೆ ಅಧಿಕಾರಿಗಳು.

‘ವಸತಿ ಶಾಲೆಗಳಿಗೆ ಬಡ ಮತ್ತು ಮಧ್ಯಮ ವರ್ಗಗಳ ಮಕ್ಕಳೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುತ್ತಾರೆ. ಹೀಗಾಗಿ, ಅವುಗಳನ್ನು ಬಂದ್ ಮಾಡಬೇಡಿ. ಮಕ್ಕಳು ಮನೆಗೆ ಹೋದರೆ ಮತ್ತೆ ಬರುವುದು ಅಥವಾ ಕರೆತರುವುದು ಕಷ್ಟ. ಅಲ್ಲದೆ, ಕುಟುಂಬದವರಿಗೂ ಅನಾನುಕೂಲ ಆಗುತ್ತದೆ. ಹೀಗಾಗಿ, ಅವರನ್ನು ವಸತಿ ಶಾಲೆಗಳಲ್ಲೇ ಇರಿಸಿಕೊಂಡು ಊಟೋಪಚಾರದ ವ್ಯವಸ್ಥೆ ಮಾಡಬೇಕು. ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದು ಸಚಿವರು ಸೂಚಿಸಿದ್ದರು. ಅದರಂತೆ, ಕ್ರಮ ವಹಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

‘ಜ.17ರಿಂದ ಶಾಲೆಗಳ ಪುನರಾರಂಭಕ್ಕೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ತರಗತಿಗಳ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಮಾರ್ಗಸೂಚಿ ಪಾಲಿಸಿ ಅವರಿಗೆ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರವೇಶ ಪಡೆಯುವ ಸಂದರ್ಭದಲ್ಲೇ ಅವರನ್ನು ಆರ್‌ಪಿ–ಪಿಸಿಆರ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಲಾಖೆಯ ವಸತಿ ಶಾಲೆಗಳಲ್ಲಿ ಸೋಂಕಿನ ಪ್ರಕರಣಗಳು ವರದಿಯಾಗಿಲ್ಲ’ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 54 ವಸತಿ ಶಾಲೆಗಳಿವೆ. ಪ್ರವೇಶ ಪ್ರಕ್ರಿಯೆ ಬಹುತೇಕ ಮುಗಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು