ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಬಂಡಾಯ ಶಮನಕ್ಕೆ ಪ್ರಧಾನ್‌ ಯತ್ನ

ವಿಫಲವಾದ ಮಾತುಕತೆ, ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ತಿಳಿಸಿದ ಆಕಾಂಕ್ಷಿಗಳು
Last Updated 15 ಏಪ್ರಿಲ್ 2023, 15:28 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಆಕಾಂಕ್ಷಿಗಳೊಂದಿಗೆ ಪಕ್ಷದ ರಾಜ್ಯ ಚುನಾವಣೆ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಇಲ್ಲಿ ಶನಿವಾರ ಪ್ರತ್ಯೇಕವಾಗಿ ಸಭೆ ನಡೆಸಿದರು.

ಜಿಲ್ಲೆಯ 18 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ. ಆದರೆ, ಟಿಕೆಟ್‌ ಸಿಗದ ಪರಿಣಾಮ ಹಲವರು ಅಸಮಾಧಾನಗೊಂಡಿದ್ದಾರೆ. ಕೆಲವರು ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಅವರೊಂದಿಗೆ ಪ್ರಧಾನ್‌ ಎರಡು ಗಂಟೆಗೂ ಹೆಚ್ಚು ಪ್ರತ್ಯೇಕವಾಗಿ ಮಾತುಕತೆ ನಡೆಸಿ, ಬಂಡಾಯ ಶಮನಕ್ಕೆ ಯತ್ನಿಸಿದರು. ಆದರೆ, ಎಲ್ಲರ ಮನವೊಲಿಸುವಲ್ಲಿ ವಿಫಲವಾದರು. ಕೆಲವರು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು ಎನ್ನಲಾಗಿದೆ.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನ್‌, ‘ಯಾವುದೇ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್‌ ಸಿಗದಿದ್ದಾಗ ಆಕಾಂಕ್ಷಿಗಳು ನಿರಾಸೆಗೊಳ್ಳುವುದು ಸಹಜ. ಈ ಬಾರಿ ನಮ್ಮ ಪಕ್ಷದಿಂದ ಸ್ಪರ್ಧಿಸಲು 25 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರು. ಈ ಪೈಕಿ 224 ಮಂದಿ ಆಯ್ಕೆ ಮಾಡಬೇಕಿತ್ತು. ಹಾಗಾಗಿ, ನಿಯಮಾನುಸಾರವಾಗಿ ಪಕ್ಷದ ವರಿಷ್ಠರು ಟಿಕೆಟ್‌ ಘೋಷಿಸಿದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸುವಂತೆ ತಿಳಿಸಿದ್ದೇವೆ’ ಎಂದರು.

‘ಪಕ್ಷ ತೊರೆದ ಲಕ್ಷ್ಮಣ ಸವದಿ ಅವರಿಗೆ ಬಿಜೆಪಿಯು ಎಲ್ಲ ಸ್ಥಾನಮಾನ ನೀಡಲಾಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಉಪಮುಖ್ಯಮಂತ್ರಿ ಮಾಡಿದ್ದೆವು. ನಂತರ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ಅಥಣಿ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಗೆಲ್ಲುತ್ತಾರೆ’ ಎಂದು ಹೇಳಿದರು.

ಸಂಸದೆ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ, ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮಹಾಂತೇಶ ಕವಟಗಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT