ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಜಿಲ್ಲೆಯ ಇಬ್ಬರಿಗೆ ಸಂಸದೀಯ ಕಾರ್ಯದರ್ಶಿ ಸ್ಥಾನ

ಲಕ್ಷ್ಮಿ ಮೈಸೂರು ಮಿನರಲ್ಸ್‌ ಅಧ್ಯಕ್ಷೆ
Last Updated 22 ಡಿಸೆಂಬರ್ 2018, 10:58 IST
ಅಕ್ಷರ ಗಾತ್ರ

ಬೆಳಗಾವಿ: ‍ಪ್ರಸ್ತುತ ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಜಿಲ್ಲೆಯ ಇಬ್ಬರು ಶಾಸಕರಾದ ಕಾಂಗ್ರೆಸ್‌ನ ಮಹಾಂತೇಶ ಕೌಜಲಗಿ ಹಾಗೂ ಡಾ.ಅಂಜಲಿ ನಿಂಬಾಳ್ಕರ್‌ ಅವರಿಗೆ ಸಂಸದೀಯ ಕಾರ್ಯದರ್ಶಿ ಸ್ಥಾನ ಸಿಕ್ಕಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಮೈಸೂರು ಮಿನರಲ್ಸ್ ಅಧ್ಯಕ್ಷರ ಹುದ್ದೆಯನ್ನು ನೀಡಲಾಗಿದೆ.

ಶುಕ್ರವಾರ ಪ್ರಕಟಿಸಿದ್ದ ನಿಗಮ, ಮಂಡಳಿಗಳ ಹುದ್ದೆ ಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ಶನಿವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ ಸಹಿ ಇರುವ ಹೊಸ ಪಟ್ಟಿಯಲ್ಲಿ ಹೆಬ್ಬಾಳಕರ ಅವರನ್ನು ಮೈಸೂರು ಮಿನರಲ್ಸ್ ಅಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಲಾಗಿದೆ.

ಮಹಾಂತೇಶ ಅವರು ವಿಧಾನಸಭೆ ಮತ್ತು ವಿಧಾನಪರಿಷತ್‌ ಸದಸ್ಯರಾಗಿ ತಲಾ ಒಂದು ಬಾರಿ ಕೆಲಸ ಮಾಡಿ, ಕಳೆದ ಚುನಾವಣೆಯಲ್ಲಿ ಬೈಲಹೊಂಗಲ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಲಿಂಗಾಯತ ಕೋಟಾದಲ್ಲಿ ಅವರಿಗೆ ಅವಕಾಶ ಸಿಕ್ಕಿದೆ ಎನ್ನಲಾಗುತ್ತಿದೆ.

ಅಂಜಲಿ, ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ ನಿಂಬಾಳ್ಕರ್‌ ಪತ್ನಿ. ಬಾಲಭವನದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದಾರೆ. 2013ರ ಚುನಾವಣೆಯಲ್ಲಿ ಖಾನಾಪುರ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ದೊರೆಯದಿದ್ದಾಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಮೇಲೆ ಸ್ಪರ್ಧಿಸಿ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಪ್ರಾಬಲ್ಯದ ನಡುವೆಯೂ ಗೆದ್ದಿದ್ದಾರೆ. ಮೊದಲ ಗೆಲುವಿನಲ್ಲೇ ಅವರಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ದೊರೆತಿದೆ.

‘ನನಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ, ಪಕ್ಷ ನೀಡುವ ಕೆಲಸ ಮಾಡಲು ಸಿದ್ಧವಿದ್ದೇನೆ’ ಎಂದು ಅಂಜಲಿ ಪ್ರತಿಕ್ರಿಯಿಸಿದರು.

ಲಕ್ಷ್ಮಿ ಹೆಬ್ಬಾಳಕರ ವಿಧಾನಸಭೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಿಂದ ಒಮ್ಮೆ ಸೋತಿದ್ದರು. ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಿಂದ ಭಾರಿ ಅಂತರದಿಂದ ಗೆದ್ದಿದ್ದಾರೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದಾರೆ.

‘ಪಕ್ಷದ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ಕೊಡುವ ಜವಾಬ್ದಾರಿ ನಿರ್ವಹಿಸುತ್ತೇನೆ’ ಎಂದು ಲಕ್ಷ್ಮಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT