ಬೆಳಗಾವಿ: ‘ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಅಪಘಾತ ಸಂಭವಿಸುವ ಸ್ಥಳ ಗುರುತಿಸಿ, ಅಪಘಾತಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಕಳೆದ ಮೂರು ವರ್ಷಗಳಲ್ಲಿ ಆಗಿರುವ ಅಪಘಾತಗಳು, ಅದರಲ್ಲಿ ಮೃತಪಟ್ಟವರ ಸಂಖ್ಯೆ ಮತ್ತು ಅಪಘಾತ ವಲಯಗಳ ಮಾಹಿತಿ ಒಳಗೊಂಡ ಸಮಗ್ರ ವರದಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.
‘ನಗರ ವ್ಯಾಪ್ತಿಯಲ್ಲಿ ವಾಹನಗಳ ಅತಿಯಾದ ವೇಗ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಬೆಳಗಾವಿ ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸಿದ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಹಾಳಾದ ರಸ್ತೆಯಲ್ಲಿನ ಗುಂಡಿ ಮುಚ್ಚಬೇಕು’ ಎಂದು ಹೇಳಿದರು.
‘ಅಪಘಾತ ನಿಯಂತ್ರಣಕ್ಕಾಗಿ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಸುವಂತೆ ಜಾಗೃತಿ ಮೂಡಿಸಬೇಕು. ಹೆಲ್ಮೆಟ್ ಬಳಸದ ಸವಾರರಿಗೆ ದಂಡ ವಿಧಿಸುವ ಜತೆಗೆ, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಮಿತಿಗಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೊರಿಕ್ಷಾ ಚಾಲಕರ ಚಾಲನಾ ಪರವಾನಗಿ ರದ್ದುಪಡಿಸಬೇಕು’ ಎಂದು ತಿಳಿಸಿದರು.
‘ಮುಂದಿನ ತಿಂಗಳಿನಿಂದ ನಗರದ ಎಲ್ಲ ಆಟೊರಿಕ್ಷಾಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಲಾಗುವುದು. ಹಾಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪೊಲೀಸ್ ಇಲಾಖೆಯವರು ಆಟೊರಿಕ್ಷಾ ಚಾಲಕರ ಸಂಘಟನೆ ಜತೆ ಸಭೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶ್ರುತಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಎಸ್.ಸೊಬರದ ಇತರರಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ‘ಅತಿಯಾದ ವೇಗದ ಚಾಲನೆಯಿಂದ ಹೆಚ್ಚಿನ ಅಫಘಾತ ಸಂಭವಿಸುತ್ತಿವೆ. ಇವುಗಳ ನಿಯಂತ್ರಣಕ್ಕೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.