ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ವಿರೋಧ ಪಕ್ಷದಲ್ಲೇ ಕೂರಲಿದೆ: ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ
Last Updated 1 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ಗೋಕಾಕ: ‘ಕಾಂಗ್ರೆಸ್-ಜೆಡಿಎಸ್ ಪಕ್ಷದವರು ಎಷ್ಟೇ ಬೊಬ್ಬೆ ಹೊಡೆದರೂ ಎಲ್ಲ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸುತ್ತಾರೆ. ಬಿಜೆಪಿ ಸರ್ಕಾರ ಮುಂದುವರಿಯಬಾರದೆಂದು ವಿರೋಧಿಗಳು ರಾಜಕೀಯ ಷಡ್ಯಂತ್ರ ನಡೆಸುತ್ತಿರುವುದು ಗೋಪ್ಯವಾಗಿ ಉಳಿದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮತ ಕ್ಷೇತ್ರದ ಅಂಕಲಗಿ ಗ್ರಾಮದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಕಚ್ಚಾಟ ಇಲ್ಲದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ರಮೇಶ ಜಾರಕಿಹೊಳಿ ಅವರು ಗಟ್ಟಿಯಾಗಿ ನಿಂತು 16 ಶಾಸಕರನ್ನು ಬೆನ್ನಿಗೆ ಕಟ್ಟಿಕೊಂಡು ಬಂದಿದ್ದರಿಂದ ನಾನು ಅಧಿಕಾರ ಪಡೆದೆ’ ಎಂದು ಗುಣಗಾನ ಮಾಡಿದರು.

‘ನಾನೇ ಮುಂದಿನ ಮುಖ್ಯಮಂತ್ರಿ ಎಂದು ಹಲವು ಮಾಜಿಗಳು ತಿರುಕನ ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್‌ 3-4 ಹೋಳಾಗಿದೆ. ಅಭಿವೃದ್ಧಿಗಿಂತ ಆಂತರಿಕ ಕಚ್ಚಾಟವೇ ಅವರಿಗೆ ಪ್ರಧಾನವಾಗಿದೆ. ರಾಜ್ಯದಲ್ಲಿ ರಾಜಕೀಯ ಗೊಂದಲ ಉಂಟು ಮಾಡುವ ವ್ಯವಸ್ಥಿತ ಪಿತೂರಿ ಮಾಡುತಿದ್ದಾರೆ. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲೇ ಕೂರಲಿದೆ’ ಎಂದರು.

‘ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡುತ್ತೇವೆ. ಮಹಿಳಾ ಸಬಲೀಕರಣಕ್ಕಾಗಿ ಸ್ತ್ರೀ ಶಕ್ತಿ ಸಂಘಗಳ ಬಲವರ್ಧನೆಗೆ ಕ್ರಮ ಕೈಗೊಳ್ಳುತ್ತೇವೆ. ಬಜೆಟ್‌ನಲ್ಲಿ ನಾಡಿನ ಹಿತಕ್ಕಾಗಿ ಹಲವು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡುತ್ತೇವೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರೂ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ’ ಎಂದು ತಿಳಿಸಿದರು.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಶಾಸಕರಾದ ಉಮೇಶ ಕತ್ತಿ, ಆನಂದ ಮಾಮನಿ, ಎ.ಎಸ್. ಪಾಟೀಲ ನಡಹಳ್ಳಿ, ಅಭ್ಯರ್ಥಿ ರಮೇಶ ಜಾರಕಿಹೊಳಿ ಮಾತನಾಡಿದರು.

ಶಾಸಕರಾದ ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಮುಖಂಡರಾದ ಡಾ.ವಿಶ್ವನಾಥ ಪಾಟೀಲ, ಎಂ.ಎಲ್. ಮುತ್ತೆನ್ನವರ, ಸೋಮನಗೌಡ ಪಾಟೀಲ, ಜಗದೀಶ ಮೆಟಗುಡ್ಡ, ಭೀಮಶಿ ಜಾರಕಿಹೊಳಿ, ಈರಣ್ಣ ಕಡಾಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT