ಗುರುವಾರ , ಆಗಸ್ಟ್ 11, 2022
21 °C
ಬಂದ್‌ ನಡುವೆಯೂ ರಾಜ್ಯ ಕಾರ್ಯಕಾರಿಣಿ

ಡಿ.4ರಂದು ಬೆಳಗಾವಿಗೆ ಬಿಜೆಪಿ ರಾಜ್ಯ ಉಸ್ತುವಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ನಗರದಲ್ಲಿ ಡಿ.4ರಂದು ಬಿಜೆಪಿ ವಿಶೇಷ ಸಮನ್ವಯ ಸಮಿತಿ (ಕೋರ್ ಕಮಿಟಿ) ಸಭೆ ಮತ್ತು ಡಿ.5ರಂದು ರಾಜ್ಯ ಕಾರ್ಯಕಾರಿಣಿ ನಡೆಯಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾನಾ ತಿಳಿಸಿದರು.

‘ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅರುಣ್‌ ಸಿಂಗ್ ಅವರು ರಾಜ್ಯ ಉಸ್ತುವಾರಿಯಾದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಡಿ.4ರಂದು ಸಂಜೆ 7.30ಕ್ಕೆ ಅವರ ಸಮ್ಮುಖದಲ್ಲೇ ಕೋರ್‌ ಕಮಿಟಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಸಹ ಉಸ್ತುವಾರಿ ಡಿ.ಕೆ. ಅರುಣ ಪಾಲ್ಗೊಳ್ಳಲಿದ್ದಾರೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಗಾಂಧಿ ಭವನದಲ್ಲಿ 5ರಂದು ಕಾರ್ಯಕಾರಿಣಿ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ಆರಂಭಗೊಳ್ಳಲಿದೆ. ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳು,‌‌ ಮೋರ್ಚಾಗಳ ಅಧ್ಯಕ್ಷರು ಸೇರಿ‌ 149 ಪದಾಧಿಕಾರಿಗಳು ನೇರವಾಗಿ ಭಾಗವಹಿಸಲಿದ್ದಾರೆ. 37 ಜಿಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, 69 ಹೊಸ ಕಾರ್ಯಕಾರಿಣಿ ಸದಸ್ಯರು, 25 ವಿಶೇಷ ಸದದ್ಯರು, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು, 160 ಮಂದಿ ವಿಧಾನಸಭೆ  ಮತ್ತು ವಿಧಾನಪರಿಷತ್ ಸದಸ್ಯರು ಸೇರಿ 434 ಮುಖಂಡರು ಕೋವಿಡ್–19 ಕಾರಣದಿಂದಾಗಿ ಆನ್‌ಲೈನ್‌ನಲ್ಲಿ ಪಾಲ್ಗೊಳ್ಳುವರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಿಕೊಳ್ಳಲು ತಂತ್ರ ರೂಪಿಸಲಾಗುವುದು’ ಎಂದು ತಿಳಿಸಿದರು.

‘ಕೆಲವು ಸಂಘಟನೆಗಳು ಡಿ.5ರಂದು ನಡೆಸಲಿರುವ ಕರ್ನಾಟಕ ಬಂದ್‌ ಅನ್ನು ಯಾರೂ ಬೆಂಬಲಿಸುವುದಿಲ್ಲ. ಹೀಗಾಗಿ, ಕಾರ್ಯಕಾರಿಣಿಗೆ ತೊಂದರೆ ಆಗುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು