ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ವಿವಾದ ಮುಗಿದ ಅಧ್ಯಾಯ: ಜಿಲ್ಲಾ ಉಸ್ತುವಾರಿ ಸಚಿವ ಶೆಟ್ಟರ್

Last Updated 26 ಜನವರಿ 2020, 12:00 IST
ಅಕ್ಷರ ಗಾತ್ರ

ಬೆಳಗಾವಿ: ‘ಬೆಳಗಾವಿ ನಮ್ಮದು. ಹೀಗಾಗಿ, ಗಡಿ ವಿವಾದ ಮುಗಿದ ಅಧ್ಯಾಯವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ಇತ್ತೀಚೆಗೆ ಕೆಲವರು ವಿನಾಕಾರಣ ಗಡಿ ವಿಷಯ ಕೆಣಕುವ ಪ್ರಯತ್ನ ಮಾಡುತ್ತಿದ್ದಾರೆ. ರಾಜಕೀಯ ಉದ್ದೇಶದಿಂದ ತಮ್ಮ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ. ಇಲ್ಲಿನ ಜನರು ಪ್ರಚೋದನೆಗೆ ಒಳಗಾಗದೇ ಎಂದಿನಂತೆಯೇ ಸೌಹಾರ್ದದಿಂದ ಇರಬೇಕು. ಪ್ರಚೋದನೆ ಮಾಡುತ್ತಿರುವ ಮಹಾರಾಷ್ಟ್ರದ ಶಿವಸೇನೆಯವರಿಗೆ ಯಶಸ್ಸಾಗುವುದಿಲ್ಲ, ಗಡಿ ವಿಷಯದಲ್ಲಿ ಕಾನೂನು ಹೋರಾಟಕ್ಕೂ ಸರ್ಕಾರ ಸಿದ್ಧವಿದೆ’ ಎಂದರು.

‘ದೇಶದ ಅಭಿವೃದ್ಧಿಗೆ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಪೂರಕವಾಗಿದೆ. ಇದು ಯಾರ ಪೌರತ್ವವನ್ನೂ ‌ಕಿತ್ತುಕೊಳ್ಳುವುದಿಲ್ಲ. ಬದಲಿಗೆ ಪೌರತ್ವ ನೀಡುತ್ತದೆ. ಎಲ್ಲ ಭಾರತೀಯರೂ ಇದನ್ನು ಬೆಂಬಲಿಸಬೇಕು. ಈ ಕಾಯ್ದೆ ಜಾರಿಯಿಂದ ಗಣರಾಜ್ಯೋತ್ಸವ ಮತ್ತಷ್ಟು ಅರ್ಥಪೂರ್ಣವಾಗುತ್ತದೆ’ ಎಂದು ಹೇಳಿದರು.

ಪರಿಹಾರ ನೀಡಲಾಗಿದೆ:‘2019ರ ಆಗಸ್ಟ್‌ನಲ್ಲಿ ಉಂಟಾದ ಅತಿವೃಷ್ಟಿ, ನೆರೆಯಿಂದಾಗಿ ಜಿಲ್ಲೆಯಲ್ಲಿ ಹಾನಿಯಾದ 44847 ಮನೆಗಳ ಪೈಕಿ 44,019 ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ₹ 311.57 ಕೋಟಿ ಜಮೆಯಾಗಿದೆ. 2.21 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು. ಇದರಲ್ಲಿ 1,56,785 ರೈತರಿಗೆ ₹ 238.14 ಪರಿಹಾರ ತಂತ್ರಾಂಶದ ಮೂಲಕ ನೇರವಾಗಿ ರೈತರ ಬ್ಯಾಂಕ್‌ ಖಾತೆಗಳಿಗೆ ಜಮೆಯಾಗಿದೆ’ ಎಂದು ಮಾಹಿತಿ ನೀಡಿದದರು.

‘ಪ್ರವಾಹದಿಂದ ಹಾನಿಗೊಳಗಾದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಕಟ್ಟಡಗಳು, ಅಂಗನವಾಡಿ ಕಟ್ಟಡಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು, ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗಳು, ರಸ್ತೆಗಳು, ಸೇತುವೆಗಳ ತುರ್ತು ದುರಸ್ತಿಗೆ ₹ 99.82 ಕೋಟಿ ವೆಚ್ಚದಲ್ಲಿ 4,563 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಸಮಗ್ರ ಅಭಿವೃದ್ಧಿ ಸರ್ಕಾರದ ಗುರಿಯಾಗಿದೆ’ ಎಂದು ತಿಳಿಸಿದರು.

ಆಕರ್ಷಕಪಥಸಂಚಲನ:27 ತುಕಡಿಗಳು ನಡೆಸಿದ ಪಥಸಂಚಲನ ಗಮನಸೆಳೆಯಿತು. ವಿವಿಧ ಶಾಲೆಗಳು ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ, ದಕ್ಷಿಣ ಶಾಸಕ ಅಭಯ ಪಾಟೀಲ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉತ್ತರವಲಯ ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್, ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್‌ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ಎಸ್ಪಿ ಲಕ್ಷ್ಮಣ ನಿಂಬರಗಿ, ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT