ಬುಧವಾರ, ಮೇ 12, 2021
17 °C

ಯುವ ಕಾಂಗ್ರೆಸ್‌ನಿಂದ ಮತ ಯಾಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಮತ ಬೇಟೆ ನಡೆಸಿದರು.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ ತಾಲ್ಲೂಕಿನ ಮೊದಗಾ ಗ್ರಾಮದಲ್ಲಿ ಬೈಕ್ ರ‍್ಯಾಲಿ ಮೂಲಕ ಮತ ಯಾಚಿಸಿದರು.

‘ಯುವ ಶಕ್ತಿಯಿಂದಾಗಿಯೇ ಭಾರತವು ಇಂದು ಇಡೀ ವಿಶ್ವದ ಗಮನಸೆಳೆದಿದೆ. ಯುವಕರು ಮಹಾನ್‌ ನಾಯಕರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಿ ಹೊರಹೊಮ್ಮಬೇಕು. ನಮ್ಮ ಪರವಾಗಿ ದನಿ ಎತ್ತುವವರನ್ನು ಸಂಸತ್ತಿಗೆ ಕಳುಹಿಸಬೇಕು’ ಎಂದು ಹೇಳಿದರು.

‘ದೇಶದ ಬೆನ್ನೆಲುಬಾದ ರೈತರು ಇಂದು ಸಂಕಷ್ಟಕ್ಕೀಡಾಗಿದ್ದಾರೆ. ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದು ನಮಗೆ ಮಾರಕವಾಗಿವೆ ಎಂದು ಆತಂಕ ವ್ಯಕ್ತಪಡಿಸಿ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಅವರ ಸಂಕಷ್ಟ ಆಲಿಸುತ್ತಿಲ್ಲ. ಅತಿವೃಷ್ಟಿ ಮತ್ತು ನೆರೆಯಿಂದ ಮನೆ ಕಳೆದುಕೊಂಡು ಕಣ್ಣೀರಿಡುತ್ತಿರುವ ಸಂತ್ರಸ್ತರಿಗೆ ನೆರವಾಗಿಲ್ಲ. ಒಂದು ವರ್ಷದಿಂದ ಕೋವಿಡ್‌ನಿಂದಾಗಿ ಜನರು ಊಟಕ್ಕೂ ಪರದಾಡುವ ಸ್ಥಿತಿ ಬಂದಿದೆ. ಆರ್ಥಿಕ ಸಂಕಷ್ಟ ಹೆಚ್ಚುತ್ತಿದೆ. ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಲೇ ಇದೆ. ಹೀಗಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಪ್ರಧಾನಿ ಸುಳ್ಳು ಭರವಸೆಗಳನ್ನು ನೀಡುತ್ತಲೇ ಕಾಲಹರಣ ಮಾಡುತ್ತಿದ್ದಾರೆ. ಕೇಂದ್ರದ ಜನವಿರೋಧಿ ನೀತಿಯ ವಿರುದ್ಧ ಪ್ರತಿಭಟಿಸಬೇಕು’ ಎಂದರು.

ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ, ‘ದೇಶದ ಬದಲಾವಣೆಗೆ ಯುವ ಜನರು ಒಂದಾಗಬೇಕು’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.