ಸೋಮವಾರ, ಮಾರ್ಚ್ 8, 2021
24 °C

ಗಡಿಯಲ್ಲಿ ಚೆಕ್‌ಪೋಸ್ಟ್, ಕೋವಿಡ್ ನೆಗೆಟಿವ್ ವರದಿ ಇಲ್ಲದವರಿಗೆ ಪ್ರವೇಶವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್–19 ಹೆಚ್ಚುತ್ತಿರುವುದರಿಂದ ಜಿಲ್ಲೆಯ ಗಡಿಯಲ್ಲಿ ನಿಗಾ ವಹಿಸಲಾಗಿದೆ. ಆ ರಾಜ್ಯದಿಂದ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಕೊಗನೋಳಿ, ಕಾಗವಾಡ, ಅಥಣಿ ಹಾಗೂ ಸದಲಗಾದಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿದ್ದು, ಜನರನ್ನು ತ‍ಪಾಸಣೆಗೆ ಒಳಪಡಿಸಲಾಗುತ್ತಿದೆ.

ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮಹಾರಾಷ್ಟ್ರದಿಂದ ಬರುವವರಿಗೆ 72 ಗಂಟೆಗಳ ಒಳಗಾಗಿ ಪಡೆದ ‘ನೆಗೆಟಿವ್‌ ಆರ್‌ಟಿಪಿಸಿಆರ್ ಕೋವಿಡ್ ತಪಾಸಣಾ ಪ್ರಮಾಣಪತ್ರ’ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಇಲ್ಲವಾದಲ್ಲಿ ವಾಪಸ್ ಕಳುಹಿಸಲಾಗುತ್ತಿದೆ.

‘ಆ ರಾಜ್ಯದಿಂದ ಅತಿ ಹೆಚ್ಚಿನ ಜನರು ಬರುವ ಕೊಗನೋಳಿ ಚೆಕ್‌ಪೋಸ್ಟ್‌ನಲ್ಲಿ ಆರೋಗ್ಯ ಇಲಾಖೆಯಿಂದ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪಿಸಲಾಗಿದೆ. ಮಹಾರಾಷ್ಟ್ರದ ಇತರ ರಾಜ್ಯದವರಿಗೆ ತಪಾಸಣೆಗೆ ಒಳಪಡಿಸಿ ಪ್ರವೇಶ ನೀಡಲಾಗುತ್ತಿದೆ. ಕೋವಿಡ್ ಲಕ್ಷಣವಿದ್ದರೆ ಅವರನ್ನು ಪರೀಕ್ಷೆಗೆ ಒಳಪಡಿಸಲು ಸಮೀಪದ ಆರೋಗ್ಯ ಕೇಂದ್ರಗಳಿಗೆ ಕಳುಹಿಸಲಾಗುವುದು. ಮಾರ್ಗಸೂಚಿಯಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮಹಾರಾಷ್ಟ್ರದ ದೇವಾಲಯಗಳು ಅಥವಾ ಇತರ ಸ್ಥಳಗಳಿಗೆ ಹೋಗಿ ವಾಪಸಾಗುವ ಕರ್ನಾಟಕದವರಿಗೆ ಪ್ರವೇಶ ನೀಡಲಾಗುತ್ತಿದೆ. ಅವರಿಗೆ ಕೋವಿಡ್–19 ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಅವರ ಮಾಹಿತಿ ಕಲೆ ಹಾಕಲಾಗುತ್ತಿದೆ. ಕೋವಿಡ್ ನೆಗೆಟಿವ್ ವರದಿ ಇಲ್ಲದವರನ್ನು ಅಲ್ಲೇ ತಡೆಯುವಂತೆ ಕೊಲ್ಹಾಪುರ ಜಿಲ್ಲಾಧಿಕಾರಿ ಜೊತೆಗೂ ಚರ್ಚಿಸಿದ್ದೇನೆ’ ಎಂದು ಮಾಹಿತಿ ನೀಡಿದರು.

‘ಮಹಾರಾಷ್ಟ್ರದಿಂದ ಏಳು ದಿನಗಳಲ್ಲಿ ಜಿಲ್ಲೆಗೆ ಬಂದವರ ಟ್ರಾವೆಲ್ ಹಿಸ್ಟರಿ ಕಲೆ ಹಾಕಲಾಗುವುದು. ಮುಂಬೈ, ಪುಣೆ, ಅಮರಾವತಿ ಮೊದಲಾದ ಕಡೆಗಳಿಂದ ಇಲ್ಲಿಗೆ ಟಿಕೆಟ್ ಕಾಯ್ದಿರಿಸಿದವರ ಮಾಹಿತಿ ಪಡೆದು, ಕೋವಿಡ್ ನೆಗೆಟಿವ್ ವರದಿ ಕಡ್ಡಾಯದ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು’ ಎಂದು ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ತಿಳಿಸಿದರು.

ಕೊಗನೋಳಿ ಚೆಕ್‌ಪೋಸ್ಟ್‌ಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಎಸ್ಪಿ ಲಕ್ಷ್ಮಣ ನಿಂಬರಗಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಬ್ಬಂದಿಗೆ ತಾಕೀತು ಮಾಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು