ಶನಿವಾರ, ಜೂನ್ 25, 2022
24 °C
ವಿಡಿಯೊ ಸಂವಾದ

ಪ್ರವಾಹ ನಿರ್ವಹಣೆ: ಮಹಾರಾಷ್ಟ್ರದೊಂದಿಗೆ ಸಮನ್ವಯಕ್ಕೆ ಮುಖ್ಯಮಂತ್ರಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ನೆರೆಯ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಅಲ್ಲಿನ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಬೇಕು ಮತ್ತು ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಸಂಭವನೀಯ ಪ್ರವಾಹ ನಿರ್ವಹಣೆಯ ಸಿದ್ಧತೆಗೆ ಸಂಬಂಧಿಸಿದಂತೆ ಶನಿವಾರ ನಡೆಸಿದ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.

‘ಎಲ್ಲೆಡೆ ಮಳೆ ಆಗುತ್ತಿರುವುದರಿಂದ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಸಾಧ್ಯತೆ ಇರುತ್ತದೆ. ಆದ್ದರಿಂದ ಆ ರಾಜ್ಯದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕ ಇಟ್ಟುಕೊಳ್ಳಬೇಕು. ಅಲ್ಲಿನ ಮಳೆಯ ಪ್ರಮಾಣ, ಜಲಾಶಯಗಳ ಸಂಗ್ರಹ ಮತ್ತಿತರ ವಿಷಯಗಳ ಕುರಿತು ನಿರಂತರವಾಗಿ ಮಾಹಿತಿ ಪಡೆದುಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಆ ರಾಜ್ಯದ ನೀರಾವರಿ ಇಲಾಖೆಯ ಜೊತೆ ಸಮನ್ವಯ ಸಾಧಿಸಿ ನಿರಂತರವಾಗಿ ನಿಗಾ ವಹಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು. ಮಳೆಯ ಪ್ರಮಾಣ ಜಾಸ್ತಿಯಾದಾಗ ರಸ್ತೆ ಸಂಪರ್ಕಕ್ಕೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು. ನದಿತೀರದ ಗ್ರಾಮಗಳು ಹಾಗೂ ಪ್ರವಾಹದಿಂದ ಪೀಡಿತಗೊಳ್ಳಬಹುದಾದ ಗ್ರಾಮಗಳಿಗೆ ಅಧಿಕಾರಿಗಳು ಮಳೆಗಾಲ ಆರಂಭದಲ್ಲಿಯೇ ಕಡ್ಡಾಯವಾಗಿ ಭೇಟಿ ನೀಡಿ ಅಲ್ಲಿನ ಮನೆಗಳ ಸ್ಥಿತಿಗತಿಯ ಬಗ್ಗೆ ಸೂಕ್ತ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಿದ್ಧಪಡಿಸಬೇಕು’ ಎಂದು ತಿಳಿಸಿದರು.

‘ಅತಿವೃಷ್ಟಿ, ಸಿಡಿಲು ಮತ್ತಿತರ ಕಾರಣಗಳಿಂದ ಜನರ ಪ್ರಾಣಹಾನಿ ಹಾಗೂ ಜಾನುವಾರು ಜೀವ ಹಾನಿಯಾದಾಗ 24 ಗಂಟೆಗಳಲ್ಲಿ ನಿಯಮಾವಳಿ ಪ್ರಕಾರ ಪರಿಹಾರ ಒದಗಿಸಬೇಕು. ಬೆಳೆ ಹಾನಿ ಕುರಿತು ಕೃಷಿ, ತೋಟಗಾರಿಕೆ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ನಿಖರ ವರದಿ ನೀಡಬೇಕು’ ಎಂದರು.

ಮುಂಜಾಗ್ರತಾ ಕ್ರಮಕ್ಕೆ ನಿರ್ದೇಶನ: ‘ಮಳೆಯ‌ ಮುನ್ಸೂಚನೆ ಆಧರಿಸಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮುಳುಗಡೆ, ಭೂಕುಸಿತ ಸೇರಿದಂತೆ ಆಯಾ‌ ಜಿಲ್ಲೆಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕು.
ಬೆಳೆ ಹಾನಿ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ‘ಜಿಲ್ಲೆಯಲ್ಲಿ ನಿಗದಿಗಿಂತ ಮಳೆಯ ಪ್ರಮಾಣ ಜಾಸ್ತಿಯಾಗಿದೆ. ಬೆಳೆ ಹಾನಿಯ ಕುರಿತು ನಿಖರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ವಿಜಯಪುರ ಜಿಲ್ಲೆಯ ಕುರಿತು ಮಾಹಿತಿ ನೀಡಿದ ಅರಣ್ಯ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ‌ ವ್ಯವಹಾರಗಳ ಸಚಿವ ಉಮೇಶ ಕತ್ತಿ, ‘ವಿಜಯಪರದಲ್ಲಿ ಮಳೆ ಜಾಸ್ತಿಯಾಗಿದ್ದು, ಯಾವುದೇ ಹಾನಿಯಾಗಿಲ್ಲ’ ಎಂದು ತಿಳಿಸಿದರು.

‘ವಾರದಿಂದ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಮೇ 15ರಿಂದ 21ರವರೆಗೆ 14 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ, 114 ಮಿ.ಮೀ. ಬಿದ್ದಿದೆ. ಯಾವುದೇ ಮಾನವ ಜೀವ ಹಾನಿಯಾಗಿಲ್ಲ; ಎರಡು ಜಾನುವಾರು ಸಾವಿಗೀಡಾಗಿವೆ. ಪರಿಹಾರ ನೀಡಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ರಸ್ತೆ, ಸೇತುವೆಗೆ ಹಾನಿಯಾಗಿಲ್ಲ. ಮೇ 15ರಿಂದ 21ರ ಅವಧಿಯಲ್ಲಿ 1 ಮನೆ ಪೂರ್ಣ ಕುಸಿದಿದ್ದು, 193 ಮನೆಗಳು ಭಾಗಶಃ ಕುಸಿದಿವೆ. 30 ಹೆಕ್ಟೇರ್ ಕೃಷಿ ಬೆಳೆ ಮತ್ತು 15.3 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ’ ಎಂದು ತಿಳಿಸಿದರು.

ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಜಿಲ್ಲಾ ಪಂಚಾಯ್ತಿ ಸಿಇಒ ಎಚ್‌.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು