ಗುರುವಾರ , ಜೂಲೈ 9, 2020
21 °C
ಅಂತರ್ಜಲ ಚೈತನ್ಯ, ನರೇಗಾ ಪ್ರಗತಿ ಪರಿಶೀಲನಾ ಸಭೆ

ಅಂತರ್ಜಲ ಹೆಚ್ಚಿಸಲು ಆರ್ಟ್‌ ಆಫ್‌ ಲಿವಿಂಗ್‌ ಜೊತೆ ಯೋಜನೆ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಶ್ರೀರವಿಶಂಕರ ಗುರೂಜಿ ಅವರ ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆಯ ಜೊತೆಗೂಡಿ ಅಂತರ್ಜಲ ಮಟ್ಟ ಹೆಚ್ಚಿಸಲು ಅಂತರ್ಜಲ ಚೇತನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಇದರ ಸಮರ್ಪಕ ಅನುಷ್ಠಾನಕ್ಕಾಗಿ ಬೆಳಗಾವಿ ಜಿಲ್ಲೆಯ ಅಧಿಕಾರಿಗಳೂ ಕೈ ಜೋಡಿಸಬೇಕು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಸೂಚಿಸಿದರು.

ಇಲ್ಲಿನ ಪ್ರವಾಸಿಮಂದಿರದಲ್ಲಿ ಮಂಗಳವಾರ ನಡೆದ ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ನೀರಾವರಿ ಹಾಗೂ ಕಬ್ಬು ಬೆಳೆ ಹೆಚ್ಚಾಗಿರುವ ಕಾರಣ ಅಂತರ್ಜಲ ಮಟ್ಟ ಹೆಚ್ಚಿಸಲು ಆದ್ಯತೆ ನೀಡಬೇಕು. ನರೇಗಾ ಯೋಜನೆ ಹಾಗೂ ಬದು ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿಗದಿಪಡಿಸಿದ ಗುರಿ ಸಾಧನೆಗೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

‘ಘನ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಶೀಘ್ರದಲ್ಲಿ ನಿರ್ಮಿಸಬೇಕು. ಇದಕ್ಕಾಗಿ ಅಗತ್ಯವಾದ ಎಲ್ಲ ನೆರವನ್ನು ಜಿಲ್ಲಾಧಿಕಾರಿ ಮೂಲಕ ಪಡೆದುಕೊಂಡು ಶೀಘ್ರ ಕಾಮಗಾರಿ ಆರಂಭಿಸಬೇಕು’ ಎಂದು ಹೇಳಿದರು.

ನರೇಗಾ ಯೋಜನೆ ಅನುಷ್ಠಾನದ ಕುರಿತು ಸಚಿವರಿಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ‘ಬೆಳಗಾವಿ ಜಿಲ್ಲೆಗೆ ಒಟ್ಟು 1.20 ಕೋಟಿ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಇದುವರೆಗೆ ಶೇ 42 ಗುರಿ ಸಾಧಿಸಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಸ್ವಲ್ಪಮಟ್ಟಿಗೆ ನಿಧಾನವಾಗಿ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಚುರುಕುಗೊಂಡಿದೆ’ ಎಂದು ವಿವರಿಸಿದರು.

‘ಬದು ನಿರ್ಮಾಣ 3,444 ಗುರಿ ಹೊಂದಲಾಗಿದ್ದು, ಜಿಲ್ಲೆಯ ಬಹುತೇಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು. ಹಿರಣ್ಯಕೇಶಿ ನದಿ ವ್ಯಾಪ್ತಿಯಲ್ಲಿ , 2,33,713 ಮಾನವ ದಿನಗಳ ಸೃಜನೆಗೆ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಬಂದಿಲ್ಲ. ಸ್ವಚ್ಛ ಭಾರತ ಮಿಷನ್, ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ ಸೇರಿದಂತೆ ಬಹುತೇಕ ಕೆಲಸಗಳು ಇದೀಗ ಚುರುಕು ಪಡೆದುಕೊಂಡಿವೆ’ ಎಂದು ತಿಳಿಸಿದರು.

ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ, ‘ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಲಾಮೃತ ಯೋಜನೆಯನ್ನು ವಿಸ್ತರಿಸಬೇಕು’ ಎಂದು ಕೋರಿಕೊಂಡರು.

ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ‘ಅಂತರ್ಜಲ ಮಟ್ಟ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮುತುವರ್ಜಿ ವಹಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ ಅವರು ನರೇಗಾ ಅನುಷ್ಠಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು