ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೊಂದ ಮಹಿಳೆಯರಿಗೆ ತ್ವರಿತವಾಗಿ ನೆರವಾಗಿ

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ
Last Updated 15 ಮಾರ್ಚ್ 2021, 14:31 IST
ಅಕ್ಷರ ಗಾತ್ರ

ಬೆಳಗಾವಿ: ‘ನೊಂದ ಮಹಿಳೆಯರಿಗೆ ಒಂದೇ ಸೂರಿನಡಿ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ‘ಮಾದರಿ ಒನ್ ಸ್ಟಾಪ್ ಸೆಂಟರ್’ ಅನ್ನು ಜಿಲ್ಲೆಯಲ್ಲಿ ಸ್ಥಾಪಿಸಬೇಕು’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್.ಕುಂದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಾಲ್ಲೂಕು ಮಟ್ಟದಲ್ಲಿ ಮಹಿಳಾ ಕಾನೂನಿನ ಬಗ್ಗೆ ಮಾಹಿತಿ ನೀಡಲು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ಚನ್ನಮ್ಮ ಪಡೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು’ ಎಂದರು.

‘ಮಹಿಳೆಯರ ಅಭಿವೃದ್ಧಿ ಮತ್ತು ಕ್ಷೇಮಕ್ಕಾಗಿ ಜಾರಿಗೆ ಬಂದಿರುವ ಯೋಜನೆಗಳ ಲಾಭವನ್ನು ಸಮರ್ಪಕವಾಗಿ ತಲುಪಿಸಬೇಕು. ಯೋಜನೆಗಳ ಮಾಹಿತಿ
ಸಿಗುವಂತೆಯೂ ನೋಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಮಹಿಳೆಯರು ತಮ್ಮ ಉದ್ಯೋಗದ ಜೊತೆಗೆ ಆರೋಗ್ಯದ ಕಾಳಜಿ ವಹಿಸಬೇಕು. ಇದಕ್ಕಾಗಿ ಸ್ವಲ್ಪ ಸಮಯ ಮೀಸಲಿಟ್ಟುಕೊಳ್ಳಬೇಕು’ ಎಂದು ತಿಳಿಸಿದರು.

‘ಹೆಣ್ಣು ಮಕ್ಕಳನ್ನು ಗೌರವಿಸುವ ಗುಣ ಹಾಗೂ ಜವಾಬ್ದಾರಿಯನ್ನು ಗಂಡು ಮಕ್ಕಳಿಗೂ ಪಾಲಕರು ಕಲಿಸಿಕೊಡಬೇಕು’ ಎಂದರು.

ಜಿಲ್ಲಾಧಿಕಾರಿ ಎಂ.ಜಿ. ಹೀರೆಮಠ ಮಾತನಾಡಿ, ‘ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನೂ ಸುಗಮವಾಗಿ ಕಾರ್ಯಗತಗೊಳಿಸಲಾಗುತ್ತಿದೆ. ಪರಿಶೀಲನಾ ಸಭೆಗಳನ್ನು ನಿಯಮಿತವಾಗಿ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಚನ್ನಮ್ಮ ಮಹಿಳಾ ಪೋಲಿಸ್ ಪಡೆಯು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಉಜ್ವಲ, ಸ್ವಾಧರ, ಸ್ತ್ರೀ ಶಕ್ತಿ, ಸಾಂತ್ವನ ಕೇಂದ್ರಗಳ ಪ್ರಗತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ ನೀಡಿದರು.

‘ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಕುರಿತಂತೆ 15 ಪ್ರಕರಣಗಳು ದಾಖಲಾಗಿವೆ. ಇದುವರೆಗೆ ಸ್ತ್ರೀ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರು ₹ 116 ಕೋಟಿ ಸಾಲ ಪಾವತಿಸಿರುವುದು ಹೆಮ್ಮೆಯ ವಿಷಯವಾಗಿದೆ. ಮಾತೃವಂದನಾ ಯೋಜನೆ ಹಾಗೂ ಪೋಷಣ್ ಅಭಿಯಾನದಲ್ಲಿ ಬೆಳಗಾವಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT