ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶೆಟ್ಟರ್, ಕೋರೆಗೆ ಅಭಿನಂದನಾ ಸಮಾರಂಭ

Published 11 ಜುಲೈ 2024, 7:05 IST
Last Updated 11 ಜುಲೈ 2024, 7:05 IST
ಅಕ್ಷರ ಗಾತ್ರ

ರಾಮದುರ್ಗ: ‘ಬೆಳಗಾವಿ ಲೋಕಸಭೆಯ ಸಂಸದ ಜಗದೀಶ ಶೆಟ್ಟರ್ ಮತ್ತು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಜುಲೈ 12 ರಂದು ರಾಮದುರ್ಗ ಬಿಜೆಪಿ ಮಂಡಲದ ಆಶ್ರಯದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ’ ಎಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 12 ರಂದು ಸಂಜೆ 4 ಗಂಟೆಗೆ ಪಟ್ಟಣದ ಹೊರವಲಯದಲ್ಲಿರುವ ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದರು.

‘ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಅಬ್ಬರದ ನಡುವೆಯು ₹1.80 ಲಕ್ಷ ಅಧಿಕ ಮತಗಳಿಂದ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಮತ್ತು ಸುಮಾರು ಮೂರು ದಶಕಕ್ಕಿಂದ ಹೆಚ್ಚು ಕಾಲ ಕೆಎಲ್‍ಇ ಕಾರ್ಯಾಧ್ಯಕ್ಷರಾಗಿ ಸಂಸ್ಥೆಯನ್ನು ಹೆಮ್ಮರವಾಗಿ ಬೆಳೆಸಿರುವ ಪ್ರಭಾಕರ ಕೋರೆ ಮತ್ತು ಬೆಳಗಾವಿ ಜಿಲ್ಲಾ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಅವರನ್ನು ರಾಮದುರ್ಗ ಬಿಜೆಪಿ ಮಂಡಲದ ಪರವಾಗಿ ಅಭಿನಂದಿಸಲಾಗುವುದು. ಈ ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಬಿಜೆಪಿ ವಿವಿಧ ಘಟಕಗಳ ಪಧಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದರು.

‘ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಭರಾಟೆಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಸರ್ಕಾರ ಅಧಿಕಾರಕ್ಕೇರಿ ವರ್ಷವಾದರೂ ತಾಲ್ಲೂಕಿನಲ್ಲಿ ಯಾವುದೇ ಹೊಸ ಯೋಜನೆಗಳು ಅನುಷ್ಠಾನವಾಗುತ್ತಿಲ್ಲ. ಶಾಸಕರು ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ’ ಎಂದು ಆರೋಪಿಸಿದರು.

‘ರಾಜ್ಯದಲ್ಲಿ ಡೆಂಗಿ ಜ್ವರ ವ್ಯಾಪಕವಾಗುತ್ತಿದೆ. ತಾಲ್ಲೂಕಿನಲ್ಲಿಯೂ ಡೆಂಗಿ ಹರಡುತ್ತಿದೆ. ಚುನಾಯಿತ ಪ್ರತಿನಿಧಿಗಳಾದವರು ಜನರ ಆರೋಗ್ಯದತ್ತ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ ಬೀಳಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಕೊಪ್ಪದ, ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಉಮೇಶ ಹಕಾಟಿ  ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT