ಶನಿವಾರ, ಡಿಸೆಂಬರ್ 5, 2020
25 °C
‘ಬಸವಕಲ್ಯಾಣದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಮಾಹಿತಿ ಇಲ್ಲ’

ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಹುನ್ನಾರ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್‌ನಲ್ಲೇ ಹುನ್ನಾರ ನಡೆದಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

‘ಶೀಘ್ರವೇ ಮುಖ್ಯಮಂತ್ರಿ ಬದಲಾಗಲಿದ್ದಾರೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಇಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಸವದಿ, ‘ಸಿದ್ದರಾಮಯ್ಯ ಅವರದ್ದು ಕೇವಲ  ರಾಜಕೀಯ ಹೇಳಿಕೆಯಾಗಿದೆ. ಉಪ ಚುನಾವಣೆಯಲ್ಲಿ ಜನರಿಗೆ ಗೊಂದಲ ಉಂಟು ಮಾಡಲು ಹೇಳಿದ ಮಾತದು. ವಿರೋಧಪಕ್ಷದ ನಾಯಕನ ಸ್ಥಾನದಿಂದ ಅವರನ್ನು ತೆಗೆಯುತ್ತಾರೆ ಎನ್ನುವ ಖಚಿತ ಮಾಹಿತಿ ಯಡಿಯೂರಪ್ಪ ಅವರಿಗೂ ಸಿಕ್ಕಿದೆ’ ಎಂದರು.

‘ಇನ್ನೂ ಎರಡೂವರೆ ವರ್ಷ ಯಡಿಯೂರಪ್ಪ ಅವರೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

‘ಉಪ ಚುನಾವಣೆ ಮತ್ತು ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಂಪುಟ ವಿಸ್ತರಣೆ ಆಗಲಿದೆ. ದೆಹಲಿಗೆ ತೆರಳಿ ವರಿಷ್ಠರ ಗಮನಕ್ಕೆ ತಂದು ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ’ ಎಂದರು.

‘ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧಿಸುವ ಬಗ್ಗೆ ನನಗೆ ನಿಖರ ಮಾಹಿತಿ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಅರವಿಂದ ‌ಪಾಟೀಲ ಸೇರ್ಪಡೆಗೆ ಮುಖ್ಯಮಂತ್ರಿ ಸಹಮತ:

‘ಖಾನಾಪುರದ ಮಾಜಿ ಶಾಸಕ ಅರವಿಂದ ಪಾಟೀಲ ಕೆಲವೇ ದಿನಗಳಲ್ಲಿ ಬಿಜೆಪಿ ಸೇರ್ಪಡೆಯಾಗುತ್ತಾರೆ. ಈ ವಿಷಯವಾಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯಮಂತ್ರಿ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದರು.

‘ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ಶಕ್ತಿ ತುಂಬುವ ಬ್ಯಾಂಕ್. ಮೂವತ್ತು ವರ್ಷಗಳಿಂದ ನಾನಿಲ್ಲಿ ಸತತವಾಗಿ ನಿರ್ದೇಶಕನಾಗಿದ್ದೇನೆ’ ಎಂದರು.

‘ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧಿಸಿರುವುದರಿಂದ, ನಾವು ಸಿಬಿಐ ದುರ್ಬಳಕೆ ಮಾಡಿಕೊಂಡಿದ್ದೇವೆ ಎಂದು ಕಾಂಗ್ರೆಸ್‌ನವರು ಆರೋಪಿಸುತ್ತಿರುವುದರಲ್ಲಿ ಅರ್ಥವಿಲ್ಲ. ನಿಷ್ಪಕ್ಷ‍‍ಪಾತವಾಗಿ ತನಿಖೆ ನಡೆಸಿ, ಯೋಗೀಶಗೌಡ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಆ ಸಂಸ್ಥೆ ಕ್ರಮ ಕೈಗೊಂಡಿದೆ. ಮನಬಂದಂತೆ ದೂರುವುದು ಸರಿಯಲ್ಲ’ ಎಂದು ಪ್ರತಿಕ್ರಿಯಿಸಿದರು.

‘ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್‌ನವರು ನಿಸ್ಸೀಮರು. ಸುಳ್ಳು ಹೇಳುವುದಕ್ಕೆ ಪ್ರಶಸ್ತಿ ನೀಡುವುದಿದ್ದರೆ ಕಾಂಗ್ರೆಸ್ ನಾಯಕರಿಗೆ ಕೊಡಬೇಕು’ ಎಂದು ವ್ಯಂಗ್ಯವಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು