ಬೆಳಗಾವಿ: ‘ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಕಾಂಗ್ರೆಸ್‌ನ ನಾಯಕರಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕಾಂಕ್ಷಿಯಾಗಿದ್ದರು. ಈಗ ಹತ್ತಾರು ನಾಯಕರು ಹುಟ್ಟಿಕೊಂಡಿದ್ದಾರೆ’ ಎಂದು ಸಂಸದ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು.
ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ನಲ್ಲಿ ಉದ್ಭವಿಸಿದ ಈ ಆಂತರಿಕ ಕಲಹ ಶೀಘ್ರ ಇನ್ನಷ್ಟು ಬಿರುಸುಗೊಳ್ಳಲಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಈಗ ಬಯಲಿಗೆ ಬಂದಿವೆ. ಭ್ರಷ್ಟಾಚಾರ ಮಿತಿಮೀರಿದ್ದು, ಆಡಳಿತದ ಮೇಲೆ ನಿಯಂತ್ರಣವೇ ಇಲ್ಲದಂತಾಗಿದೆ. ಈ ಸರ್ಕಾರ ಅಸ್ಥಿರವಾಗಿದ್ದು, ಶೀಘ್ರದಲ್ಲೇ ಪತನವಾಗಬಹುದು’ ಎಂದು ತಿಳಿಸಿದರು.