ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಯೋಜನೆ: ಸಹಾಯಧನ ಹೆಚ್ಚಿಸಲು ಆಗ್ರಹ

Last Updated 20 ಡಿಸೆಂಬರ್ 2018, 10:50 IST
ಅಕ್ಷರ ಗಾತ್ರ

ಬೆಳಗಾವಿ: ವಸತಿ ಯೋಜನೆ ಸಹಾಯಧನವನ್ನು ₹ 5 ಲಕ್ಷಕ್ಕೆ ಹೆಚ್ಚಿಸಬೇಕು ಹಾಗೂ ಗ್ರಾಮೀಣ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ನೀಡಬೇಕು ಎಂದು ಒತ್ತಾಯಿಸಿ ಕಟ್ಟಡ ಕಾರ್ಮಿಕರ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘದವರು ಗುರುವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.

‘ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ಸಕಾಲದಲ್ಲಿ ದೊರೆಯುತ್ತಿಲ್ಲ. ಇದರಿಂದ ಕಾರ್ಮಿಕ ಕುಟುಂಬಗಳಿಗೆ ಜೀವನ ಸಾಗಿಸಲು ಸಮಸ್ಯೆ ಆಗುತ್ತಿದೆ. ಕಾರ್ಮಿಕ ಇಲಾಖೆಯಲ್ಲಿರುವ ಕಾರ್ಮಿಕ ನಿರೀಕ್ಷಕರು ಮತ್ತು ಗುಮಾಸ್ತ ಹುದ್ದೆಗಳು ಖಾಲಿ ಇರುವುದರಿಂದ ಕಾರ್ಮಿಕ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ. ಹೀಗಾಗಿ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಒತ್ತಾಯಿಸಿದರು.

‘ಕಾರ್ಮಿಕ ಇಲಾಖೆ ಅಧಿಕಾರಿಗಳು ಲಂಚದ ಬೇಡಿಕೆ ಇಡುತ್ತಿರುವುದು ಕಂಡುಬರುತ್ತಿದೆ. ಅಲ್ಲದೇ ತಮ್ಮ ಕಾರ್ಯವ್ಯಾಪ್ತಿ ಹೊರತುಪಡಿಸಿ ಬೇರೆ ಕಡೆಗಳಲ್ಲಿ ಗುರುತಿನ ಚೀಟಿಗಳನ್ನು ನೀಡುತ್ತಿರುವುದು ಸಾಮಾನ್ಯವಾಗಿದೆ. ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು. ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಸಾಲ ಸೌಲಭ್ಯ ಒದಗಿಸಬೇಕು’ ಎಂದು ಅಗ್ರಹಿಸಿದರು.

‘ವೈದ್ಯಕೀಯ ವೆಚ್ಚ ಸಹಾಯಧನವನ್ನು ₹ 5 ಲಕ್ಷಕ್ಕೆ ಹೆಚ್ಚಿಸಬೇಕು. ಮದುವೆ ಸಹಾಯಧನ ಮೊತ್ತವನ್ನು ₹ 2 ಲಕ್ಷಕ್ಕೆ ಏರಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುವ ಭ್ರಷ್ಟಾಚಾರದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಚನ್ನಬಸಪ್ಪ ದೊಡಮನಿ, ಗುರುಸಿದ್ದಪ್ಪ ಹಡಪದ, ಅಜ್ಜಪ್ಪ ಹಡಪದ, ಶ್ರೀಕಾಂತಗೌಡ ಪುಟ್ಟಣಗೌಡರ, ವಿಶ್ವನಾಥ ಕೊಪ್ಪದ, ನಿಂಗನಗೌಡ ಪಾಟೀಲ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT