ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಆತಂಕ: ಬೆಳಗಾವಿ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ

Last Updated 31 ಜುಲೈ 2021, 12:31 IST
ಅಕ್ಷರ ಗಾತ್ರ

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಮತ್ತು ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದಾಗಿ ಗಡಿಯ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.

ಅಲ್ಲಿಂದ ಬರುವವರಿಂದ ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್‌ಟಿಪಿಸಿಆರ್) ಕೇಳಲಾಗುತ್ತಿದೆ. ಅದು ಇಲ್ಲದಿದ್ದರೆ ಕೋವಿಡ್ ಡೋಸ್‌ ಪಡೆದಿರುವ ಬಗ್ಗೆ ಪ್ರಮಾಣಪತ್ರ ಪ್ರಸ್ತುತಪಡಿಸಬೇಕು. ಇವೆರಡೂ ಇಲ್ಲದಿದ್ದರೆ ಪ್ರವೇಶ ನೀಡುತ್ತಿಲ್ಲ. ಅಲ್ಲಿಂದಲೇ ವಾಪಸ್ ಕಳುಹಿಸಲಾಗುತ್ತಿದೆ. ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಗಡಿಯ ವಿವಿಧೆಡೆ 22 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಪುಣೆ–ಬೆಂಗಳೂರು ಹೆದ್ದಾರಿಯಲ್ಲಿರುವ ಕೊಗನೊಳ್ಳಿ ಟೋಲ್‌ನಾಕಾ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಕೋವಿಡ್ ಪರೀಕ್ಷೆಗೆ (ಆರ್‌ಎಟಿ) ಒಳಪಡಿಸುವುದಕ್ಕೂ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಪೊಲೀಸರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸರ್ಕಾರಿ ಮತ್ತು ಖಾಸಗಿ ಬಸ್‌ಗಳಲ್ಲಿನ ಪ್ರಯಾಣಿಕರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಪ್ರಯಾಣಿಕರ ಬಳಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಇದೆಯೇ ಎನ್ನುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಚಾಲಕರು ಹಾಗೂ ನಿರ್ವಾಹಕರಿಗೆ ಸೂಚಿಸಲಾಗಿದೆ. ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ನಿಗಾ ವಹಿಸುತ್ತಿದ್ದಾರೆ.

ಅಲ್ಲಲ್ಲಿ ಕೆಲವರು ಹೊಲಗಳಿಗೆ ಹೋಗುವ ಕಾಲುದಾರಿಗಳು, ಎತ್ತಿನಗಾಡಿ ರಸ್ತೆಗಳಲ್ಲಿ ಜನರು ಸಂಬಂಧಿಕರ ಮನೆಗಳಿಗೆ ಹಾಗೂ ವ್ಯಾಪಾರ-ವ್ಯವಹಾರಕ್ಕೆ ‘ಕಳ್ಳದಾರಿ’ಯಲ್ಲಿ ಹೋಗಿ ಬರುವುದು ಅಥಣಿ ತಾಲ್ಲೂಕಿನ ತೆಲಸಂಗ ಭಾಗದಲ್ಲಿ ಕಂಡುಬರುತ್ತಿದೆ.

‘ಕೋವಿಡ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಮಾರ್ಗಸೂಚಿ ಪ್ರಕಾರ ದಾಖಲೆಗಳಿಲ್ಲದಿದ್ದರೆ ವಾಪಸ್ ಕಳುಹಿಸಲಾಗುತ್ತಿದೆ. ಎಲ್ಲ ಕಡೆಯೂ ನಿಗಾ ವಹಿಸಲಾಗಿದೆ. ಸರ್ಕಾರ ಶನಿವಾರ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿ ಪ್ರಕಾರ ಕೋವಿಡ್–19 ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದರೂ ಅಥವಾ ಪಡೆಯದಿದ್ದರೂ 72 ಗಂಟೆ ಒಳಗೆ ಮಾಡಿಸಿರುವ ಆರ್‌ಟಿಪಿಸಿಆರ್‌ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಇದನ್ನು ಆ.1ರ ಮಧ್ಯಾಹ್ನದ ನಂತರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲಾಗುವುದು. ವರದಿ ಇಲ್ಲದಿದ್ದರೆ ಪ್ರವೇಶ ನೀಡುವುದಿಲ್ಲ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಬರುವ ಬಾಚಿ/ಶಿನೋಳ್ಳಿ, ರಕ್ಕಸಕೊಪ್ಪ, ಬೆಕ್ಕಿನಕೆರೆ, ಚೆಲುವ್ಯಾನಟ್ಟಿ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ, ವಿಮಾನನಿಲ್ದಾಣದಲ್ಲಿ ಚೆಕ್‌ಪೋಸ್ಟ್‌ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಥರ್ಮಲ್‌ ಸ್ಕ್ರೀನಿಂಗ್‌ ನಡೆಸುತ್ತಿದ್ದಾರೆ. ಬಸ್‌ ನಿಲ್ದಾಣದಲ್ಲಿ ಪರೀಕ್ಷೆಯನ್ನೂ (ಆರ್‌ಎಟಿ) ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT