ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಜಿಲ್ಲೆಯಾದ್ಯಂತ ಕೋವಿಡ್ ಲಸಿಕಾ ಮೇಳ

ಪ್ರತಿಯೊಬ್ಬರು ಪಡೆದುಕೊಳ್ಳಬೇಕು: ಸಂಸದೆ ಮಂಗಲಾ
Last Updated 17 ಸೆಪ್ಟೆಂಬರ್ 2021, 13:52 IST
ಅಕ್ಷರ ಗಾತ್ರ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಕೋವಿಡ್–19 ನಿರೋಧಕ ಲಸಿಕೆ ನೀಡುವ ಮೇಳವನ್ನು ದೊಡ್ಡ ಪ್ರಮಾಣದಲ್ಲಿ ಶುಕ್ರವಾರ ನಡೆಸಲಾಯಿತು.

ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳೊಂದಿಗೆ ಕೆಲವು ಸಂಘ–ಸಂಸ್ಥೆಗಳಿಂದಲೂ ಶಿಬಿರಗಳನ್ನು ಆಯೋಜಿಸಲಾಗಿತ್ತು. ಬಿಜೆಪಿಯ ವಿವಿಧ ಘಟಕಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಅಂಗವಾಗಿಯೂ ಕೋವಿಡ್ ಲಸಿಕಾ ಮೇಳಗಳನ್ನು ನಡೆಸಲಾಯಿತು. ಒಂದೇ ದಿನ ಸಾವಿರಾರು ಮಂದಿ 1ನೇ ಹಾಗೂ 2ನೇ ಡೋಸ್ ಲಸಿಕೆಯನ್ನು ಪಡೆದುಕೊಂಡರು.

ಜಿಲ್ಲಾ ಮಟ್ಟದ ಕಾರ್ಯಕ್ರಮ:‘ಸಂಭವನೀಯ ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಎಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ನೀಡುವ ಮಹತ್ತರ ಉದ್ದೇಶದಿಂದ ಸರ್ಕಾರವು ಲಸಿಕಾ ಮೇಳ ನಡೆಸುತ್ತಿದೆ. ಎಲ್ಲ ನಾಗರಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಸಂಸದೆ ಮಂಗಲಾ ಸುರೇಶ ಅಂಗಡಿ ಕೋರಿದರು.

ಇಲ್ಲಿನ ಸರ್ದಾರ್‌ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ನಡೆದ ಲಸಿಕಾ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಉತ್ತರ ಮತಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ, ‘ಪ್ರತಿಯೊಬ್ಬರಿಗೂ ಉಚಿತವಾಗಿ ಲಸಿಕೆ ನೀಡುವುದು ನಮ್ಮ ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ’ ಎಂದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ. ಮುನ್ಯಾಳ ಉಪಸ್ಥಿತರಿದ್ದರು.

ಬಳಿಕ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ನಗರದ ವಿವಿಧ ಪ್ರದೇಶಗಳಲ್ಲಿ ಸಂಚರಿಸಿ ಲಸಿಕಾ ಮೇಳವನ್ನು ವೀಕ್ಷಿಸಿದರು.

‘ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಯಿತು. ಗ್ರಾಮದಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ವಾರ್ಡ್‌ವಾರು ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಇದಲ್ಲದೇ ನಗರದ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ಉಚಿತವಾಗಿ ನೀಡಲಾಯಿತು ಎಂದು ತಿಳಿಸಿದರು.

‘ಕೋವಿಡ್ ಸಂಭವನೀಯ ಮೂರನೇ ಅಲೆಯ ಬಗ್ಗೆ ವರದಿಗಳಿವೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಅರ್ಹರೆಲ್ಲರೂ ಲಸಿಕೆ ಪಡೆದುಕೊಳ್ಳಬೇಕು. ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಎಚ್‌.ವಿ. ದರ್ಶನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT