ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ಬಗ್ಗೆ ಆತಂಕದ ಅಗತ್ಯವಿಲ್ಲ: ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ

Last Updated 1 ಮಾರ್ಚ್ 2021, 14:31 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಕೆಎಲ್‌ಇ ಆಸ್ಪತ್ರೆಯಲ್ಲಿ 2ನೇ ಹಂತದ ಲಸಿಕಾ ಕೋವಿಡ್–19 ಅಭಿಯಾನಕ್ಕೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು, ಲಸಿಕೆ ಪಡೆಯುವ ಮೂಲಕ ಸೋಮವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಕೋವಿಡ್ ಲಸಿಕೆಯು ಅತ್ಯಂತ ಸುರಕ್ಷಿತವಾಗಿದೆ. ಜನರು ಯಾವ ವದಂತಿಗಳಿಗೂ ಕಿವಿಗೊಡದೇ ಪಡೆದುಕೊಳ್ಳಬೇಕು. ಈ ಮೂಲಕ ಕೋವಿಡ್‌ನಿಂದ ದೂರವಿರಬೇಕು. ಸಮೃದ್ಧ ಭಾರತ ನಿರ್ಮಾಣ ಮಾಡಲು ಕೈಜೋಡಿಸಬೇಕು. ನಮ್ಮಲ್ಲಿಯೇ ತಯಾರಾದ ಲಸಿಕೆಗಳನ್ನು ವಿಶ್ವದ ಅನೇಕ ರಾಷ್ಟ್ರಗಳಿಗೆ ಸರಬಾರಾಜು ಮಾಡಲಾಗುತ್ತಿದೆ. ಇದು ಅತ್ಯಂತ ವಿಶ್ವಾಸಾರ್ಹ ಲಸಿಕೆ ಎಂದು ಸಾಬೀತಾಗಿದೆ. 60 ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರು ಯಾವುದೇ ಹಿಂಜರಿಕೆಯಿಲ್ಲದೆ ಲಸಿಕೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

‘ಭಾರತದಲ್ಲಿ ತಯಾರಿಸಿದ ಲಸಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೆರೆಯ ದೇಶಗಳಿಗೆ ಉಚಿತವಾಗಿ ನೀಡಿದ್ದಾರೆ. ಅಲ್ಲದೇ ದೇಶದ ಪ್ರತಿಯೊಬ್ಬರಿಗೂ ಲಸಿಕೆಯನ್ನು ಕಲ್ಪಿಸುವ ಉದ್ದೇಶ ಹೊಂದಿದ್ದಾರೆ. ಅದರಂತೆ ಉತ್ಪಾದನೆಯೂ ಇದೆ. ಯಾವುದೇ ಒಂದು ಘಟನೆ ನಡೆದಾಗ ಸಾರ್ವಜನಿಕರಲ್ಲಿ ಆತಂಕ ಸಹಜ. ಅದಕ್ಕೆ ಬೇರೆ ಕಾರಣಗಳಿರಬಹುದು. ಆದ್ದರಿಂದ ಈ ಲಸಿಕೆಯ ಬಗ್ಗೆ ಆತಂಕಪಡುವ ಅವಶ್ಯಕತೆ ಇಲ್ಲ. ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳಿಗೆ ಗಮನ ಕೊಡಬಾರದು’ ಎಂದು ಹೇಳಿದರು.

‘ದೇಶದಲ್ಲಿ ಮತ್ತೆ ಕೊರಾನಾ ಬಾಧಿತರು ಹೆಚ್ಚಾಗುತ್ತಿದ್ದು, ನಾವೆಲ್ಲ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಮೊದಲನೇ ಹಂತದಲ್ಲಿ 6,320 ಅಂದರೆ ಶೇ. 79.6ರಷ್ಟು ಆಸ್ಪತ್ರೆ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ. ಇಲ್ಲಿಯವರೆಗೆ 15ಸಾವಿರಕ್ಕೂ ಅಧಿಕ ಕೊರಾನಾ ತಪಾಸಣೆ ಮಾಡಲಾಗಿದೆ. ಈಗ ಮುಂದಿನ ಹಂತದಲ್ಲಿ ಹಿರಿಯ ನಾಗರಿಕರಿಗೆ ಲಸಿಕಾ ಅಭಿಯಾನ ಪ್ರಾರಂಭಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಲಸಿಕೆ ಪಡೆದುಕೊಳ್ಳಲು ಮುಂದೆ ಬರಬೇಕು’ ಎಂದರು.

ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಸಂಸ್ಥೆಯ ನಿರ್ದೇಶಕರಾದ ಡಾ.ವಿ.ಐ. ಪಾಟೀಲ, ಡಾ.ವಿ.ಎಸ್. ಸಾಧುನವರ ಕೂಡ ಲಸಿಕೆ ಪಡೆದರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ, ಜೆಎನ್ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರಾದ ಡಾ.ಎನ್.ಎಸ್. ಮಹಾಂತಶೆಟ್ಟಿ, ಡಾ.ವಿ.ಎ. ಕೋಠಿವಾಲೆ, ಡಾ.ವಿ.ಎಂ. ಪಟ್ಟಣಶೆಟ್ಟಿ, ಡಾ.ರಾಜೇಶ ಪವಾರ, ಡಾ.ಮಾಧವ ಪ್ರಭು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT