ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಮಸ್ಯೆ: ಅಪೂರ್ಣಗೊಂಡ ಡಿ.ಸಿ ಸಭೆ

ತರಾತುರಿಯಲ್ಲಿ ಸಭೆ ಮುಗಿಸಿದ ಜಿಲ್ಲಾಧಿಕಾರಿ: ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿದ ರೈತರು
Published 3 ಏಪ್ರಿಲ್ 2024, 4:53 IST
Last Updated 3 ಏಪ್ರಿಲ್ 2024, 4:53 IST
ಅಕ್ಷರ ಗಾತ್ರ

ಅಥಣಿ: ತಾಲ್ಲೂಕಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಮತ್ತು ಬರಗಾಲ ನಿರ್ವಹಣೆ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್‌ ಪಾಟೀಲ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆ, ಯಾವುದೇ ತಾರ್ಕಿಕ ಅಂತ್ಯವಿಲ್ಲದೇ ಕೊನೆಗೊಂಡಿತು. ಜಿಲ್ಲಾಧಿಕಾರಿ ವಿರುದ್ಧ ರೈತರು ಧಿಕ್ಕಾರ ಕೂಡ ಕೂಗಿದರು.

ತಾಲ್ಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಬರಗಾಲ ನಿರ್ವಹಣಾ ಸಭೆಯಲ್ಲಿ ತಾಲ್ಲೂಕಿನ ಪೂರ್ವ ಭಾಗದ ಹಾಗೂ ಉತ್ತರ ಭಾಗದ ಹಳ್ಳಿಗಳ ಜನರಿಗಿಂತ ಕೃಷ್ಣಾ ನದಿ ತೀರದ ಗ್ರಾಮಗಳ ರೈತರು ಮತ್ತು ರೈತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಿದ್ದರು.

ಕೃಷ್ಣಾ ನದಿಯಲ್ಲಿ ನೀರಿನ ಸಂಗ್ರಹ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಬಾವಿ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿದೆ. ಕುಡಿಯಲು ನೀರು ಸಿಗುತ್ತಿಲ್ಲ. ಜಿಲ್ಲಾಡಳಿತ ಕೂಡಲೇ ನೆರೆಯ ಮಹಾರಾಷ್ಟ್ರದಿಂದ 3 ಟಿಎಂಸಿ ಅಡಿ ನೀರನ್ನು ಬಿಡಿಸುವ ವ್ಯವಸ್ಥೆ ಮಾಡಬೇಕು. ಕೃಷ್ಣಾ ನದಿ ತೀರದಲ್ಲಿ ಕಬ್ಬಿನ ಬೆಳೆ ಒಣಗುತ್ತಿದ್ದು ದಿನದ 6 ಗಂಟೆ ವಿದ್ಯುತ್ ಪೂರೈಸಬೇಕು ಎಂದು ರೈತರು ಒತ್ತಾಯಿಸಿದರು.

ಈ ವೇಳೆ ಕೃಷ್ಣಾ ನದಿ ತೀರದ ವಿವಿಧ ಗ್ರಾಮಗಳ ರೈತರು ತಮ್ಮ ಊರಿನ ಸಮಸ್ಯೆಗಳನ್ನು ಹೇಳಲು ಮುಂದಾದಾಗ ಸಭೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು.

‘ರೈತರ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ಆದರೆ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇರುವುದರಿಂದ ಇರುವ ವ್ಯವಸ್ಥೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕಾಗಿದೆ. ಸಮಸ್ಯೆ ಪರಿಹಾರಕ್ಕಾಗಿ ಶೀಘ್ರ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಕರೆದು ಪರಿಹಾರ ಸೂಚಿಸಲಾಗುವುದು. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಹರಿಸಬೇಕಾದ 3 ಟಿಎಂಸಿ ಅಡಿ ನೀರಿನ ಕುರಿತು ರಾಜ್ಯ ಸರ್ಕಾರ ಮಟ್ಟದಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಎದುರಾಗುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲು ತಾಲ್ಲೂಕು ಆಡಳಿತಕ್ಕೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾಧಿಕಾರಿ ಮಾತು ಮುಗಿಯುತ್ತಿದ್ದಂತೆ ಎಲ್ಲ ಅಧಿಕಾರಿಗಳು ಸಭೆಯಿಂದ ಹೊರಟರು. ಇದರಿಂದ ರೈತರು ಅಕ್ರೋಶ ವ್ಯಕ್ತಪಡಿಸಿದರು.

‘ಪರಿಹಾರ ಸೂಚಿಸಲು ಬಂದ ಜಿಲ್ಲಾಧಿಕಾರಿ ಕಟಾಚಾರದ ಸಭೆ ನಡೆಸಿ ತರಾತುರಿಯಲ್ಲಿ ಹೋಗುವುದು ಸರಿಯಲ್ಲ. ನಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಮುಖಂಡ ಮಹದೇವ ಮಡಿವಾಳ ಆಗ್ರಹಿಸಿದರು.

ಅವರೊಂದಿಗೆ ದನಿಗೂಡಿಸಿದ ರೈತರು ಜಿಲ್ಲಾಧಿಕಾರಿಗೆ ಧಿಕ್ಕಾರ ಕೂಗಿದರು. ಅವರ ಕಾರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ತಡೆದರು.

ಎಸ್.ಪಿ. ಡಾ.ಭೀಮಾಶಂಕರ ಗುಳಿದ, ಚಿಕ್ಕೋಡಿ ಎಸಿ ಮಹಿಬೂಬಿ, ನೀರಾವರಿ ಇಲಾಖೆ ಮುಖ್ಯ ಎಂಜಿನಿಯರ್‌ ಎಸ್.ಜಿ.ಶ್ರೀನಿವಾಸ್ ಮತ್ತು ಪ್ರವಿಣ ಹುಣಸಿಕಟ್ಟಿ, ಅಥಣಿ ತಹಶೀಲ್ದಾರ್‌ ಯು.ವಾಣಿ, ಬಿ.ವೈ. ಹೊಸಕೇರಿ, ಚುನಾವಣಾ ಅಧಿಕಾರಿ ಮಲ್ಲಿಕಾರ್ಜುನ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಜಿಲ್ಲಾ ಪಂಚಾಯಿತಿ ಎಂಜಿನಿಯರ್‌ ವೀರಣ್ಣ ವಾಲಿ, ಡಿವೈಎಸ್ಪಿ ಶ್ರೀಪಾದ ಜಲ್ದಿ, ಸಿಪಿಐ ರವೀಂದ್ರ ನಾಯ್ಕೋಡಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT