ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಶಾನ ಭೂಮಿ ಒದಗಿಸಲು ಕ್ರಮ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

Last Updated 6 ಅಕ್ಟೋಬರ್ 2020, 12:46 IST
ಅಕ್ಷರ ಗಾತ್ರ

ಬೆಳಗಾವಿ: ‘ಪ್ರವಾಹ ಹಾಗೂ ಕೊರೊನಾ ಕಾರಣದಿಂದಾಗಿ ದಲಿತರಿಗೆ ಸ್ಮಶಾನ ಭೂಮಿ ಒದಗಿಸುವ ಪ್ರಕ್ರಿಯೆಯಲ್ಲಿ ಸ್ವಲ್ಪ ಹಿನ್ನಡೆಯಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿ ಮಂಗಳವಾರ ನಡೆದ ಅನುಸೂಚಿತ ಜಾತಿ, ಪಂಗಡಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಸ್ಮಶಾನ ಭೂಮಿ ಇಲ್ಲದಿರುವ ಗ್ರಾಮಗಳ ಪಟ್ಟಿ ಮಾಡಲಾಗಿದೆ. ಸರ್ಕಾರಿ ಭೂಮಿ ಲಭ್ಯತೆ ಆಧರಿಸಿ ಆದ್ಯತೆ ಮೇರೆಗೆ ಸ್ಮಶಾನ ಭೂಮಿ ಒದಗಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಂದಿನ ಸಭೆ ವೇಳೆಗೆ ಈ ಬಗ್ಗೆ ಆಕ್ಷೇಪ ಬಾರದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ವಿಲೇವಾರಿಗೆ ಸೂಚನೆ:‘ಸಾಲ ಸೌಲಭ್ಯ ವಿತರಣೆಯಲ್ಲಿ ಬೆಳಗಾವಿ ಜಿಲ್ಲೆಯು ರಾಜ್ಯದಲ್ಲಿ ಮುಂಚೂಣಿಯಲ್ಲಿದೆ. ಅಕ್ರಮ-ಸಕ್ರಮ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳ ತ್ವರಿತ ವಿಲೇವಾರಿಗೆ ಸಂಬಂಧಿಸಿದಂತೆ ಜಿಲ್ಲೆಯ ಮೂರೂ ಉಪ ವಿಭಾಗಾಧಿಕಾರಿಗಳಿಗೆ ವರದಿ ನೀಡಲು‌ ಸೂಚಿಸಲಾಗಿದೆ’ ಎಂದರು.

‘ನ್ಯಾಯಾಲಯಗಳಲ್ಲಿ ಬಾಕಿ ಇರುವ ದೌರ್ಜನ್ಯ ಪ್ರಕರಣಗಳ ತ್ವರಿತ ವಿಲೇವಾರಿಗೆ ಮುತುವರ್ಜಿ ವಹಿಸಬೇಕು. ಸಂತ್ರಸ್ತರಿಗೆ ಸಮರ್ಪಕ ಪರಿಹಾರ ವಿತರಿಸಬೇಕು’ ಎಂದು ಸರ್ಕಾರಿ ಅಭಿಯೋಜಕರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಮಿತಿಯ ಸದಸ್ಯ ಅಶೋಕ ಅಸೋದೆ, ‘ಪ್ರತಿ ಸಭೆಯಲ್ಲೂ ಸ್ಮಶಾನ ಭೂಮಿಯ ಬಗ್ಗೆ ಚರ್ಚೆಯಾದರೂ ಯಾವುದೇ ಪ್ರಗತಿ ಕಂಡುಬರುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ‌ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಗಮನಹರಿಸುತ್ತಿಲ್ಲ:‘ಒಂದೇ ದಿನಕ್ಕೆ 10ರಿಂದ 15 ಪ್ರಕರಣಗಳ ಸಾಕ್ಷಿದಾರರನ್ನು ಕರೆಸುತ್ತಿರುವುದರಿಂದ ಅಗತ್ಯ ಗಮನಹರಿಸುವುದು ಸಾಧ್ಯವಾಗುತ್ತಿಲ್ಲ. ಅದೇ ರೀತಿ ಸಾಕ್ಷಿಗಳ ಹಾಜರಾತಿ ಪತ್ರ ಕೂಡ ಸಮರ್ಪಕವಾಗಿ ಲಭಿಸುತ್ತಿಲ್ಲ’ ಎಂದು ದೂರಿದರು.

ಸಮಿತಿಯ ಸದಸ್ಯ ವಿಜಯ್ ತಳವಾರ ಮಾತನಾಡಿ, ‘ನಗರದ ಆರ್‌ಪಿಡಿ ವೃತ್ತದ ಸಿಗ್ನಲ್ ಬಳಿ ವೀರ ಮದಕರಿ‌ ನಾಯಕ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಜಿಲ್ಲಾಧಿಕಾರಿ ಮುಖಾಂತರ ಮನವಿ ಸಲ್ಲಿಸಲಾಗುವುದು. ಅ. 13ರಂದು ಆ ವೃತ್ತದಲ್ಲಿ ಮದಕರಿ ನಾಯಕ ಜಯಂತಿ ಆಚರಿಸಲು ತೀರ್ಮಾನಿಸಲಾಗಿದೆ. ಅದಕ್ಕೆ ಅನುಮತಿ ನೀಡಬೇಕು’ ಎಂದು ಕೋರಿದರು.

‘ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮ, ರೈಲು ನಿಲ್ದಾಣಕ್ಕೆ ಸಿಂಧೂರ ಲಕ್ಷ್ಮಣ ಹಾಗೂ ಬಸ್ ನಿಲ್ದಾಣಕ್ಕೆ ಬೆಳವಡಿ ಮಲ್ಲಮ್ಮ ಹೆಸರಿಡಲು ಸಂಘಟನೆಗಳ ಸಭೆಯಲ್ಲಿ ಚರ್ಚಿಸಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಮಹನೀಯರ ಬಗ್ಗೆ ಅವಹೇಳನಕಾರಿ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಎಚ್.ವಿ., ಡಿಸಿಪಿ ವಿಕ್ರಮ್ ಅಮಟೆ, ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT