ಶುಕ್ರವಾರ, ಮೇ 27, 2022
23 °C

ಬೆಳಗಾವಿ: ಮತ ಎಣಿಕೆ‌ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರ ಸ್ಥಾಪನೆಗಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.

ನಗರದ ಬಿ.ಕೆ. ಮಾಡೆಲ್ ಪ್ರೌಢಶಾಲೆ ಹಾಗೂ ಜ್ಯೋತಿ ಕಾಲೇಜು ಕಟ್ಟಡಗಳನ್ನು ಪರಿಶೀಲಿಸಿದರು. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ದ್ವಿಸದಸ್ಯ ಸ್ಥಾನಗಳಿಗೆ ಡಿ.10ರಂದು ಮತದಾನ ಹಾಗೂ 14ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸಿದ್ಧತೆಗೆ ಚಾಲನೆ ನೀಡಿದ್ದಾರೆ. ಸ್ಟ್ರಾಂಗ್ ರೂಂ, ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಕೊಠಡಿಗಳು ಹಾಗೂ ಅಲ್ಲಿ ಲಭ್ಯವಿರುವ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳು ಮತ್ತು ಸಂಬಂಧಿಸಿದ ಸಂಸ್ಥೆಗಳ ಪ್ರಾಚಾರ್ಯರೊಂದಿಗೆ ಚರ್ಚಿಸಿದರು.

‘ಎರಡು ಕಟ್ಟಡಗಳಲ್ಲಿ ಮತ ಎಣಿಕೆ ಪ್ರಕ್ರಿಯೆಗೆ ಅನುಕೂಲಕರವಾಗಿರುವ ಸ್ಥಳ ಅಂತಿಮಗೊಳಿಸಲಾಗುವುದು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ತಹಶೀಲ್ದಾರ್‌ ಆರ್.ಕೆ. ಕುಲಕರ್ಣಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ ಇದ್ದರು.

ನಿಷೇಧಾಜ್ಞೆ: ಚುನಾವಣಾಧಿಕಾರಿ ಕಾರ್ಯಾಲಯವನ್ನು ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಮೊದಲ ಸಭಾಂಗಣದಲ್ಲಿ ಸ್ಥಾಪಿಸಲಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ನ.15ರಿಂದ ಅನ್ವಯವಾಗುವಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.