ಮಂಗಳವಾರ, ಜೂನ್ 15, 2021
27 °C
ಜಿಲ್ಲಾಧಿಕಾರಿ ಹಿರೇಮಠ ಸೂಚನೆ

ಬೆಳಗಾವಿ | ಕಳ್ಳಬಟ್ಟಿ ಕೇಂದ್ರಗಳ ಮೇಲೆ ದಾಳಿ: ಜಿಲ್ಲಾಧಿಕಾರಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಜಿಲ್ಲೆಯಲ್ಲಿರುವ ಕಳ್ಳಬಟ್ಟಿ ಕೇಂದ್ರಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಈ ನಿಟ್ಟಿನಲ್ಲಿ ಅಬಕಾರಿ, ಪೊಲೀಸ್, ಅರಣ್ಯ ಹಾಗೂ ಸಾರಿಗೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.

ಇಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ತಂಡಗಳನ್ನು ರಚಿಸಿಕೊಂಡು, ತಯಾರಿಕಾ ಘಟಕಗಳ ಮಾಹಿತಿ ಸಂಗ್ರಹಿಸಿ ಪಟ್ಟಿ ಮಾಡಬೇಕು. ಆಗಾಗ ದಿಢೀರ್‌ ದಾಳಿ ನಡೆಸಬೇಕು. ಅಂತಹ ಘಟಕಗಳನ್ನು ನಾಶಪಡಿಸಿ, ತಪ್ಪಿತಸ್ಥರನ್ನು ಬಂಧಿಸಬೇಕು. ಈ ದಂಧೆಯಲ್ಲಿ ತೊಡಗಿರುವವರಿಗೆ ಬಿಸಿ ಮುಟ್ಟಿಸಬೇಕು. ಅಕ್ರಮವಾಗಿ ಮಾರಾಟ ಹಾಗೂ ಸಾಗಿಸುವವರ ಮೇಲೂ ನಿಗಾ ವಹಿಸಬೇಕು. ಅಕ್ರಮ ಕಂಡುಬಂದಲ್ಲಿ ಅಂತಹ ವಾಹನಗಳನ್ನು ವಶಕ್ಕೆ ಪಡೆಯಬೇಕು. ಈ ವಿಷಯದಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳವರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಕಳ್ಳಬಟ್ಟಿ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸ್ಥಳೀಯ ಸಂಸ್ಥೆಗಳು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

‘ಕಳ್ಳಬಟ್ಟಿ ದಂಧೆ ನಿರ್ಮೂಲನೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಅಬಕಾರಿ ಉಪ ಆಯುಕ್ತರಾದ ಕೆ. ಅರುಣ್‌ಕುಮಾರ್, ಎಂ.ಡಿ. ಜಯರಾಮೇಗೌಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ, ಡಿಎಫ್‌ಒ ಅಶೋಕ ಪಾಟೀಲ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.