ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಮನೆ ಹಾನಿಗೆ ತಕ್ಷಣ ಪರಿಹಾರ ಒದಗಿಸಿ’

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಡಿ.ಸಿ ಮೊಹಮ್ಮದ್ ರೋಷನ್ ಸೂಚನೆ
Published 13 ಆಗಸ್ಟ್ 2024, 15:29 IST
Last Updated 13 ಆಗಸ್ಟ್ 2024, 15:29 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೆ ಒಳಗಾದ ಮನೆಗಳ ಸ್ಥಳಗಳನ್ನು ಮಹಜರು ಮಾಡಬೇಕು. ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸಿ ಪರಿಹಾರ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಸಂಪೂರ್ಣ ಹಾನಿಗೀಡಾದ ಮನೆಗಳ ಮಾಹಿತಿ ಲಭ್ಯವಿದೆ. ಅಂಥ ಮನೆಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು. ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ವಿಳಂಬ ತೋರಬಾರದು. ಒಂದುವೇಳೆ, ರಾಜೀವ್‌ ಗಾಂಧಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ದಾಖಲಿಸಲು ತಾಂತ್ರಿಕ ತೊಂದರೆ ಎದುರಾದರೆ, ಅಂತಹ ಮನೆಗಳ ಕುರಿತ ವರದಿ ಸಲ್ಲಿಸಬೇಕು’ ಎಂದು ತಿಳಿಸಿದರು.

‘ಸಮೀಕ್ಷಾ ವರದಿ ಪ್ರಕಾರ, ಯಾವ ವರ್ಗದಡಿ ಮನೆ ಹಾನಿಯಾಗಿದೆ ಎಂದು ನಮೂದಿಸಬೇಕು. ಬೆಳಗಾವಿ ತಾಲ್ಲೂಕಿನಲ್ಲಿ ಹಾನಿಗೀಡಾದ ನಾಲ್ಕು ಮನೆಗಳಿಗೆ ಈಗಾಗಲೇ ಪರಿಹಾರ ಕೊಟ್ಟಿದ್ದೇವೆ. ಉಳಿದ ಸಂತ್ರಸ್ತರಿಗೆ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಪರಿಹಾರ ವಿತರಿಸಲು ಕ್ರಮ ವಹಿಸಬೇಕು’ ಎಂದರು. 

ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಿ: ‘ಹುಕ್ಕೇರಿ, ಅಥಣಿ, ಚಿಕ್ಕೋಡಿ ತಾಲ್ಲೂಕುಗಳಲ್ಲಿ ಹೆಚ್ಚಿನ ಬೆಳೆ ಹಾನಿಯಾಗಿದೆ. ಸಂಬಂಧಿತ ಅಧಿಕಾರಿಗಳು ಹಾನಿಗೀಡಾದ ಪ್ರದೇಶಕ್ಕೆ ತೆರಳಿ, ವಾರದೊಳಗೆ ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.

‘ಮಳೆಯಿಂದ ಜಿಲ್ಲೆಯ ವಿವಿಧೆಡೆ 100 ಕಿ.ಮೀ ರಸ್ತೆ ಹಾಳಾಗಿರುವ ಬಗ್ಗೆ ಮಾಹಿತಿಯಿದೆ. ಈ ಕುರಿತಾಗಿಯೂ ಸಮೀಕ್ಷೆ ನಡೆಸಿ, ಪೂರ್ಣ ಮಾಹಿತಿ ನೀಡಬೇಕು. ರಸ್ತೆಗಳ ನಿರ್ಮಾಣ, ದುರಸ್ತಿಗೆ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದು ರೋಷನ್ ತಿಳಿಸಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ‘ತಾಲ್ಲೂಕು ಹಂತದ ಅಧಿಕಾರಿಗಳು ಗ್ರಾಮ ಪಂಚಾಯ್ತಿಗಳಿಗೆ ಭೇಟಿ ನೀಡಿ, ಮಳೆಯಿಂದ ಆಗಿರುವ ಹಾನಿ ಪರಿಶೀಲಿಸಬೇಕು’ ಎಂದರು.

‘ಮಳೆ ಹಾನಿ ಪರಿಹಾರ ಕಾರ್ಯದಲ್ಲಿ ಪ್ರತಿ ಇಲಾಖೆಗಳ ಮಧ್ಯೆ ಸಮನ್ವಯ ಇರಬೇಕು. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಜವಾಬ್ದಾರಿಯಿಂದ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಬೆಳಗಾವಿ ತಹಶೀಲ್ದಾರ್‌ ಬಸವರಾಜ ನಾಗರಾಳ, ಕೃಷಿ ಇಲಾಖೆ ಜಂಟಿನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ, ಜಿ.ಪಂ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಿಟರ, ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT