ಶನಿವಾರ, ಏಪ್ರಿಲ್ 17, 2021
27 °C

ಲಸಿಕೆಯಿಂದ ಮರಣ ಪ್ರಮಾಣ ನಿಯಂತ್ರಣ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ರೂಪಾಂತರಿ ಕೋವಿಡ್–19ನಿಂದ ಉದ್ಭವಿಸಬಹುದಾದ ಮರಣ ಪ್ರಮಾಣವನ್ನು ಲಸಿಕೆ ಪಡೆಯುವುದರಿಂದ ನಿಯಂತ್ರಿಸುವುದು ಸಾಧ್ಯವಿದೆ. ಆದ್ದರಿಂದ ಎಲ್ಲರೂ ತಪ್ಪದೆ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಕೋವಿಡ್ ಲಸಿಕಾಕರಣ ಹಿನ್ನೆಲೆಯಲ್ಲಿ ಮಂಗಳವಾರ ತಾಲ್ಲೂಕುಮಟ್ಟದ ಅಧಿಕಾರಿಗಳೊಂದಿಗೆ ಅವರು ‌ವಿಡಿಯೊ ಸಂವಾದ ನಡೆಸಿದರು.

‘ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚಿಸಬೇಕು. ಸರ್ಕಾರದ ಮಾರ್ಗಸೂಚಿ ಪ್ರಕಾರ ಗಡಿ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ನೆರೆಯ ಜಿಲ್ಲೆಗಳಿಂದ ಬರುವ  ಪ್ರಯಾಣಿಕರ ತಪಾಸಣೆಗೆ ಆದ್ಯತೆ ‌ನೀಡಬೇಕು. ಜಿಲ್ಲೆಯಲ್ಲಿ 60 ವರ್ಷ ಮೇಲಿನವರು ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ಇದ್ದಾರೆ. ಅವರನ್ನು ಗುರುತಿಸಿ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಲಸಿಕೆ‌ ನೀಡುವ ಪ್ರಕ್ರಿಯೆಯಲ್ಲಿ ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. 60 ವರ್ಷ ಮೇಲಿನವರಿಗೆ ಲಸಿಕೆ ನೀಡಲು ಸ್ಥಳೀಯ ಸಂಘ-ಸಂಸ್ಥೆಗಳ ನೆರವಿನೊಂದಿಗೆ ವಿಶೇಷ ಅಭಿಯಾನ ನಡೆಸಬೇಕು. ಸ್ಥಳೀಯವಾಗಿ ಲಭ್ಯವಿರುವ ಅನುದಾನ ಅಥವಾ ಸೌಲಭ್ಯಗಳನ್ನು ಬಳಸಿಕೊಂಡು ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಒಂದೆರಡು ದಿನಗಳಲ್ಲಿ ಅಭಿಯಾನದಲ್ಲಿ ಪ್ರಗತಿ ಸಾಧಿಸಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಇರುವ ಹಿರಿಯ ನಾಗರಿಕರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಬೇಕು’ ಎಂದು ಸೂಚಿಸಿದರು.

‘ಗ್ರಾಮಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಿರಿಯ‌ ನಾಗರಿಕರನ್ನು ಕರೆ ತಂದು ಲಸಿಕೆ ನೀಡುವುದು ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಜವಾಬ್ದಾರಿಯಾಗಿದೆ’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಎಚ್‌.ವಿ. ದರ್ಶನ್ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ. ಮುನ್ಯಾಳ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.