‘ಉದ್ಯೋಗ ಖಾತ್ರಿ: ನಗರ, ಪಟ್ಟಣದಲ್ಲೂ ಜಾರಿಯಾಗಲಿ’

7

‘ಉದ್ಯೋಗ ಖಾತ್ರಿ: ನಗರ, ಪಟ್ಟಣದಲ್ಲೂ ಜಾರಿಯಾಗಲಿ’

Published:
Updated:
Deccan Herald

ಬೆಳಗಾವಿ: ಪ್ರಸ್ತುತ ಗ್ರಾಮಗಳ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಮಹಾತ್ಮಾ ಗಾಂಧಿ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಹಾಗೂ ಪಟ್ಟಣಗಳಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆ ಸದಸ್ಯರು ಸೋಮವಾರ ತಾಲ್ಲೂಕಿನ ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಪ್ರತಿಭಟನೆ ನಡೆಸಿದರು.

‘ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಈ ಶಿಫಾರಸು ಮಾಡಬೇಕು. ಇದು ಜಾರಿಯಾದಲ್ಲಿ ನಗರ ಹಾಗೂ ಪಟ್ಟಣಗಳ ನಿರುದ್ಯೋಗಿಗಳಿಗೆ ಉದ್ಯೋಗ ದೊರೆತಂತಾಗುತ್ತದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಸಹಸ್ರಾರು ಅಸಂಘಟಿತ ಕಾರ್ಮಿಕರಿದ್ದಾರೆ. ಕಾರ್ಮಿಕ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪಡೆಯುವುದಕ್ಕಾಗಿ ಅವರು ಜಿಲ್ಲಾ ಕೇಂದ್ರಗಳಲ್ಲಿರುವ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಇದನ್ನು ತಪ್ಪಿಸುವುದಕ್ಕಾಗಿ ಪ್ರತಿ ತಾಲ್ಲೂಕು ಕೇಂದ್ರಗಳಲ್ಲೂ ಕಚೇರಿಗಳನ್ನು ಆರಂಭಿಸಬೇಕು’ ಎಂದು ಆಗ್ರಹಿಸಿದರು.

‘ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಒಂದರಂತೆ ಸರ್ಕಾರಿ ಶಾಲೆಗಳನ್ನು ವಸತಿ ಶಾಲೆಗಳನ್ನಾಗಿ ಮಾಡಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ಜಾರಿಗೊಳಿಸಲಾಗುವ ಯೋಜನೆಗಳ ಲಾಭ ನಗರ ಹಾಗೂ ಪಟ್ಟಣ ಪ್ರದೇಶದ ರೈತರಿಗೂ ದೊರೆಯುವಂತೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಕಬ್ಬಿಗೆ ನ್ಯಾಯಸಮ್ಮತ ದರ ನಿಗದಿಪಡಿಸಬೇಕು. ಸಕ್ಕರೆ ಕಾರ್ಖಾನೆಗಳು ಉತ್ಪಾದಿಸುವ ಉಪ ಉತ್ಪನ್ನಗಳಿಂದ ಪಡೆಯುವ ಲಾಭದಲ್ಲಿ ಕಬ್ಬು ಪೂರೈಸಿದವರಿಗೂ ಪಾಲು ಕೊಡುವಂತೆ ಮಾಡಬೇಕು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ‍ಪಡಿಸಬೇಕು’ ಎಂದು ಆಗ್ರಹಿಸಿದರು.

ಮುಖಂಡ ಮಲ್ಲನಗೌಡ ಪಾಟೀಲ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !