ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡಧ್ವಜ ಹಾರಿಸಲು ಕ್ರಮಕ್ಕೆ ಆಗ್ರಹ

Last Updated 8 ಅಕ್ಟೋಬರ್ 2021, 15:42 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯದ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜಕ್ಕೆ ಚ್ಯುತಿ ಬಾರದಂತೆ ನಾಡಧ್ವಜ ಹಾರಿಸಲು ಅ.25ರೊಳಗೆ ಸರ್ಕಾರವು ಅಧಿಕೃತ ಆದೇಶ ಹೊರಡಿಸಬೇಕು. ಇಲ್ಲದಿದ್ದಲ್ಲಿ ಕನ್ನಡಪರ ಸಂಘಟನೆಗಳೊಂದಿಗೆ ಸೇರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸತ್ಯಾಗ್ರಹ ನಡೆಸಲಾಗುವುದು’ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾಡ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಕಚೇರಿಗಳ ಕಟ್ಟಡಗಳ ಮೇಲೆ ಕನ್ನಡ ಧ್ವಜ ಹಾರಿಸಲು ಅಧಿಕೃತ ಆದೇಶ ಹೊರಡಿಸುವಂತೆ 2014ರಿಂದಲೂ ಯತ್ನಿಸುತ್ತಿದ್ದೇವೆ. ಆದರೂ ಸರ್ಕಾರ ಕ್ರಮ ಕೈಗೊಳ್ಳದಿರುವುದು ವಿಷಾದನೀಯ’ ಎಂದಿದ್ದಾರೆ.

‘ರಾಷ್ಟ್ರ ಧ್ವಜಕ್ಕೆ ಚ್ಯುತಿ ಬಾರದಂತೆ ನಾಡ ಧ್ವಜ ಹಾರಿಸಲು ಮತ್ತು ಆಯ್ದ ಯಾವುದೆ ಧ್ವಜಕ್ಕೆ ರಾಜ್ಯದ ಧ್ವಜವೆಂದು ಕಾನೂನಿನ ಸ್ವರೂಪ ನೀಡಲು ಕಾನೂನಿನಲ್ಲಿ ಯಾವುದೇ ತೊಂದರೆ ಇರುವುದಿಲ್ಲ ಎಂದು ಅಡ್ವೊಕೇಟ್ ಜನರಲ್ 2015ರ ಅ. 8ರಂದು ಸರ್ಕಾರಕ್ಕೆ ಸ್ಪಷ್ಟ ಅಭಿಪ್ರಾಯ ತಿಳಿಸಿದ್ದಾರೆ. ನಾಡ ಧ್ವಜಕ್ಕೆ ಅಂತಿಮ ವಿನ್ಯಾಸ ಸಿದ್ಧಪಡಿಸಿ ಪ್ರಸ್ತಾವ ಸಲ್ಲಿಸಿದರೂ ಕೇಂದ್ರ ಸರ್ಕಾರ ಸ್ಪಷ್ಟ ಉತ್ತರ ನೀಡುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

‘ಪ್ರಾದೇಶಿಕ ಆಯುಕ್ತರ ಕಚೇರಿ ಮುಂದಿನ ಕನ್ನಡ ಧ್ವಜ ತೆರವುಗೊಳಿಸುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದ ಎಂಇಎಸ್‍ನವರು ಈಗ ಪಾಲಿಕೆ ಮುಂದಿನ ಕನ್ನಡ ಧ್ವಜ ತೆರವಿಗೆ ಒತ್ತಾಯಿಸಿದ್ದಾರೆ; ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿ ಶಾಂತಿ–ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದರೂ ಮತ ಬ್ಯಾಂಕ್ ರಾಜಕಾರಣಕ್ಕಾಗಿ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT