ಶುಕ್ರವಾರ, ಅಕ್ಟೋಬರ್ 22, 2021
29 °C

ಅರ್ಬಾಜ್‌ ಪ್ರಕರಣ: ತಪ್ಪಿತಸ್ಥರ ಬಂಧನಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಖಾನಾಪುರದಲ್ಲಿ ಈಚೆಗೆ ನಡೆದಿರುವ ಅರ್ಬಾಜ್ ಮುಲ್ಲಾ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸರು ಸಮಯ ಕೇಳಿರುವುದರಿಂದಾಗಿ, ಖಾನಾಪುರ ಮತ್ತು ಬೆಳಗಾವಿಯಲ್ಲಿ ಅ.8ರಂದು ಹಮ್ಮಿಕೊಂಡಿದ್ದ ಪ್ರತಿಭಟನೆ ಮುಂದೂಡಲಾಗಿದೆ’ ಎಂದು ಎಐಎಂಐಎಂ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಲತೀಫ್‌ಖಾನ್ ಪಠಾಣ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಪ್ರಕರಣದ ಬಗ್ಗೆ ಎಸ್ಪಿ ಲಕ್ಷ್ಮಣ ನಿಂಬರಗಿ ಅವರೊಂದಿಗೆ ಚರ್ಚಿಸಿದ್ದೇವೆ. ರೈಲ್ವೆ ಪೊಲೀಸರಿಂದ ಪ್ರಕರಣ ನಮಗೆ ವರ್ಗಾವಣೆಯಾಗಿದ್ದು, ತನಿಖೆಗೆ ಸಮಯ ಬೇಕಾಗುತ್ತದೆ ಎಂದು ಕೇಳಿದ್ದಾರೆ. ಹೀಗಾಗಿ, ಸಹಕಾರ ಕೊಡುವುದಕ್ಕೆ ಪಕ್ಷದಿಂದ ತೀರ್ಮಾನಿಸಲಾಗಿದೆ’ ಎಂದರು.

‘ಈ ಪ್ರಕರಣ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ್ದಕ್ಕಾಗಿ ಹಿಂದೂ ಸಂಘಟನೆಯವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಪೊಲೀಸರು, ಸರ್ಕಾರದ ಅಥವಾ ಯಾವುದೇ ಒತ್ತಡಕ್ಕೆ ಮಣಿದು ಸತ್ಯವನ್ನು ಮರೆಮಾಚಬಾರದು. ನಿಜವಾದ ತಪ್ಪಿತಸ್ಥರನ್ನು ಮತ್ತು ಪ್ರಮುಖ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಅರ್ಬಾಜ್‌ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು. ‌

‘ತ್ವರಿತವಾಗಿ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸದಿದ್ದಲ್ಲಿ ನಾವು ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ. ಸಿಬಿಐ ತನಿಖೆಗೆ ಒತ್ತಾಯಿಸಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.